HomeLatest News101 ರೀತಿಯ ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಹಲವು ಯೋಜನೆ; ಸಂತೋಷ್ ಲಾಡ್

101 ರೀತಿಯ ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಹಲವು ಯೋಜನೆ; ಸಂತೋಷ್ ಲಾಡ್

ಮಡಿಕೇರಿ: ಕಾರ್ಮಿಕ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಹಲವು ಯೋಜನೆ ಜಾರಿಗೊಳಿಸಿದ್ದು, ಆ ದಿಸೆಯಲ್ಲಿ ಅಸಂಘಟಿತ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸುವಂತೆ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರು ಕರೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ನಗರದ ಕ್ರಿಸ್ಟಲ್ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಮಂಡಳಿಯ ವಿವಿಧ ಯೋಜನೆಗಳ ಕುರಿತು ಬುಧವಾರ ನಡೆದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು.

ಕಾರ್ಮಿಕ ಇಲಾಖೆಯಲ್ಲಿ 26 ರಿಂದ 101 ರೀತಿಯ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿದೆ. ಇವುಗಳನ್ನು ಪಡೆದುಕೊಳ್ಳಲು ಮುಂದಾಗಬೇಕು. ಸರ್ಕಾರ ಪ್ರಮುಖವಾಗಿ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆಯನ್ನು ಜಾರಿಗೊಳಿಸಿರುವುದು ಇಡೀ ದೇಶದಲ್ಲಿ ವಿಶೇಷವಾಗಿದೆ. ಸ್ವಿಗ್ಗಿ, ಜೊಮೆಟೋಗಳಂತ ಸಂಸ್ಥೆಯಲ್ಲಿ ಆಹಾರ ಸರಬರಾಜು ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್ ಕಾರ್ಡ್, ಪೋರ್ಟಲ್, ಫಾರ್ಮಸಿ, ಬ್ಲಿಂಕಿಟ್, ಬಿಗ್ ಬಾಸ್ಕೆಟ್, ಡೊಮಿನೋಜ್ ಮತ್ತಿತರ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡ ಎಲ್ಲಾ ಅಸಂಘಟಿತರು ಗಿಗ್ ಕಾರ್ಮಿಕರಾಗಿದ್ದಾರೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಸಂಘಟಿತ ಕಾರ್ಮಿಕರಿಗೆ ಸೂಕ್ತ ಭದ್ರತೆ ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ. ಜೊತೆಗೆ ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳು, ಜನಪದ ಕಲೆ, ಹೀಗೆ ವಿವಿಧ ರೀತಿಯಲ್ಲಿ ತೊಡಗಿಸಿಕೊಂಡಿರುವ ಅಸಂಘಟಿತ ಕಾರ್ಮಿಕರಿಗೂ ಸೌಲಭ್ಯ ಜಾರಿಗೊಳಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಹಾಗೆಯೇ ಆಟೋ ರಿಕ್ಷಾ ಚಾಲಕರು ಪೇಯಿಂಟಿಂಗ್ ಮಾಡುವವರು ಸೇರಿದಂತೆ ಹಲವರಿಗೆ ಕಾರ್ಮಿಕ ಕಾಯ್ದೆ ಜಾರಿಗೊಳಿಸಲಾಗಿದ್ದು, ಅಸಂಘಟಿತ ಕಾರ್ಮಿಕರು ಅಪಘಾತದಲ್ಲಿ ಮೃತರಾದಲ್ಲಿ 5 ಲಕ್ಷ ರೂ.ವರೆಗೂ ಪರಿಹಾರ ವಿತರಿಸಲಾಗುತ್ತದೆ. ರಾಷ್ಟ್ರದಲ್ಲಿ ಶೇ.90 ರಷ್ಟು ಅಸಂಘಟಿತ ಕಾರ್ಮಿಕರಿದ್ದು, ಸಣ್ಣ ಸಣ್ಣ ಕಸುಬು ಮಾಡುತಿದ್ದಾರೆ. ಅಂತಹ 101 ವೃತ್ತಿಯನ್ನು ಗುರುತಿಸಲಾಗಿದೆ ಎಂದು ಸಚಿವರು ಹೇಳಿದರು. 

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರಿಗೆ ಆಶಾದೀಪ ಯೋಜನೆ ಜಾರಿಗೊಳಿಸಿದೆ. ಶೋಷಿತರ ಪರವಾಗಿ ಸರ್ಕಾರ ಮತ್ತು ಸಚಿವರು ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ಡಾ.ಮಂತರ್ ಗೌಡ ಅವರು ಮಾತನಾಡಿ, ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರು ಸಾಕಷ್ಟು ಸಂಖ್ಯೆಯಲ್ಲಿದ್ದು, ತೋಟಗಳಲ್ಲಿ ವಾಸ ಮಾಡುತ್ತಿದ್ದಾರೆ. ಇವರಿಗೆ ಸೂರು ಒದಗಿಸಬೇಕು ಎಂದು ಕೋರಿದರು.

 ಗ್ಯಾರಂಟಿ ಯೋಜನಾ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಮಹರೂಸ್ ಖಾನ್ ಅವರು ಮಾತನಾಡಿ ಬಡವರು ಅಲ್ಪಸಂಖ್ಯಾತರು ಹಾಗೂ ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಹಲವು ಕಾರ್ಯಕ್ರಮ ಜಾರಿಗೊಳಿಸಿದೆ ಎಂದರು.

ಕಾರ್ಮಿಕ ಇಲಾಖೆಯ ಜಂಟಿ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿ ಡಾ.ಎಸ್.ಬಿ.ರವಿಕುಮಾರ, ಅವರು ಮಾತನಾಡಿ ಅಸಂಘಟಿತ ಕಾರ್ಮಿಕರಿಗಾಗಿ 25 ಕ್ಕೂ ಹೆಚ್ಚು ಕಾರ್ಮಿಕ ಕಾಯ್ದೆಗಳನ್ನು ಸರ್ಕಾರ ಜಾರಿಗೊಳಿಸಿದೆ ಎಂದು ತಿಳಿಸಿದರು.

ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ಚಾಲಕರ ಕುಟುಂಬದವರಿಗೆ 5 ಲಕ್ಷ ರೂ. ಚೆಕ್ ಅನ್ನು ಸಚಿವರು ವಿತರಿಸಿದರು. ಈ ಸಂದರ್ಭದಲ್ಲಿ ಗೌರಮ್ಮ ಅವರು ಭಾವುಕರಾದರು.

ಜೊತೆಗೆ ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ಚಾಲಕರ ಮಕ್ಕಳಿಗೆ 10 ಸಾವಿರ ರೂ.ಗಳ ಶೈಕ್ಷಣಿಕ ಸಹಾಯಧನ ವಿತರಿಸಲಾಯಿತು. ನೋಂದಾಯಿತ 94 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‍ನ್ನು ಇದೇ ಸಂದರ್ಭದಲ್ಲಿ ಸಚಿವರು ವಿತರಿಸಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪ್ರಮುಖರಾದ ಮುಂಡರಗಿ ನಾಗರಾಜ್, ಶ್ರೀನಿವಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಕಾವೇರಿ, ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ, ಎಸ್.ಶಶಿಧರ, ಇತರರು ಇದ್ದರು. ಉತ್ತಪ್ಪ, ಕಾರ್ಮಿಕ ಇಲಾಖೆ ಆಯುಕ್ತರಾದ ಡಾ.ಎನ್.ಗೋಪಾಲಕೃಷ್ಣ ಅವರು ಭಾರತ ಸಂವಿಧಾನ ಪೀಠಿಕೆ ಓದಿದರು. ಗಿರೀಶ್ ನಾಡಗೀತೆ ಹಾಡಿದರು. ಉಪ ಕಾರ್ಮಿಕ ಆಯುಕ್ತರಾದ ಎಚ್.ಎಲ್.ಗುರುಪ್ರಸಾದ್ ಸ್ವಾಗತಿಸಿದರು. ಸಹಾಯಕ ಕಾರ್ಮಿಕ ಆಯುಕ್ತರಾದ ನಾಜಿಯಾ ಸುಲ್ತಾನ್ ವಂದಿಸಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular