ರೈತರಿಗೆ ಗುಡ್ ನ್ಯೂಸ್: ಎಲ್ಲ 5 ಲಕ್ಷಕ್ಕೂ ಅಧಿಕ ಹೆಕ್ಟೇರ್ ಬೆಳೆಹಾನಿಗೆ ಪರಿಹಾರ: ಸಿಎಂ ಸಿದ್ಧರಾಮಯ್ಯ

ಮಂಡ್ಯ: ಈ ವರ್ಷ ಸುಮಾರು 82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಬಿತ್ತನೆ ಆಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಗಗನಚುಕ್ಕಿ ಜಲಪಾತೋತ್ಸವ -2025 ರಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಸುಮಾರು 5 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಮಳೆಯಿಂದ ಬೆಳೆ ಹಾನಿಯಾಗಿದೆ. ಅವೆಲ್ಲಕ್ಕೂ ಕೂಡಾ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

ಈಗಾಗಲೇ ಮಳೆಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ, ಜಾನುವಾರುಗಳ ಪ್ರಾಣ ಹಾನಿಗೆ, ಮನೆಗಳನ್ನು ಕಳೆದುಕೊಂಡವರಿಗೆ ಜಿಲ್ಲಾಡಳಿತದಿಂದ ಪರಿಹಾರ ಕೊಡಲಾಗಿದೆ. ಇತ್ತೀಚೆಗೆ ಜಿಲ್ಲಾಧಿಕಾರಿಗಳ ಸಭೆ ನಡೆಸಿ, ಇನ್ನು ಹತ್ತು ದಿನಗಳಲ್ಲಿ ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಆಧರಿಸಿ ಆದಷ್ಟು ಬೇಗನೆ ಬೆಳೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

ಪರಿಹಾರ ನೀಡಲು ಸರ್ಕಾರದಲ್ಲಿ ಹಣದ ಕೊರತೆಯಿಲ್ಲ. ಆದರೂ ಗ್ಯಾರಂಟಿ ಯೋಜನೆಗಳಿಂದ ಸರ್ಕಾರದಲ್ಲಿ ದುಡ್ಡಿಲ್ಲ, ಅಭಿವೃದ್ಧಿ ಕಾರ್ಯಗಳಿಗೆ ದುಡ್ಡಿಲ್ಲ ಎಂದು ವಿರೋಧ ಪಕ್ಷದವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗಾಗಿ ಇದುವರೆಗೆ ಸರ್ಕಾರ 99 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದೆ. ಶೀಘ್ರದಲ್ಲೇ 1ಲಕ್ಷ ಕೋಟಿ ರೂಪಾಯಿಗಳನ್ನು ಮುಟ್ಟುತ್ತೇವೆ. ಅಭಿವೃದ್ಧಿ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಾದ ಅನುದಾನ ಸರ್ಕಾರದಲ್ಲಿ ಲಭ್ಯವಿದೆ. ವಿರೋಧ ಪಕ್ಷದವರ ಸುಳ್ಳು ಪ್ರಚಾರದಲ್ಲಿ, ಆಪಾದನೆಗಳಲ್ಲಿ ಯಾವುದೇ ಹುರುಳಿಲ್ಲ, ಸುಳ್ಳು ಸುದ್ದಿಗಳನ್ನು ಹೇಳಿ ಜನರನ್ನು ಪ್ರಚೋದಿಸಿ ಸಮಾಜದಲ್ಲಿ ಶಾಂತಿಯನ್ನು ಕದಡುವುದೇ ಅವರ ಕೆಲಸ. ಜನರು ಇದಕ್ಕೆ ಅವಕಾಶ ನೀಡದೆ ನೆಮ್ಮದಿಯ ಬದುಕು ಕಟ್ಟಿಕೊಳ್ಳಬೇಕು ಎಂದರು.

ಸಮಾಜದಲ್ಲಿ ಜಾತಿ, ಧರ್ಮಗಳನ್ನು ಒಡೆಯುವುದು, ಜನರನ್ನು ಎತ್ತಿ ಕಟ್ಟುವುದು ವಿರೋಧಪಕ್ಷದ ಕೆಲಸ.  ಕುವೆಂಪು ಹೇಳಿದ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ನಾವೆಲ್ಲರೂ ಮನುಷ್ಯರಾಗಿ ಪರಸ್ಪರ ಪ್ರೀತಿ ವಿಶ್ವಾಸಗಳಿಂದ ಬಾಳಬೇಕು ಹಾಗೂ ಸಮಾಜ ಒಡೆಯುವ ಶಕ್ತಿಗಳಿಂದ ದೂರ ಇರಬೇಕು.

ಕಳೆದ ಲೋಕಸಭಾ ಚುನಾವಣೆಯಿಂದ ಜೆಡಿಎಸ್ ಪಕ್ಷವು, ಬಿಜೆಪಿಯೊಂದಿಗೆ ಸೇರಿ ಬಿಟ್ಟಿದೆ. ಮುಂದೆ ಅದೇ ಪಕ್ಷದೊಂದಿಗೆ ವಿಲೀನವಾದರೂ ಆಶ್ಚರ್ಯವಿಲ್ಲ. ಕೇವಲ  ನಮ್ಮ ಸರ್ಕಾರ ಮಾತ್ರ ಸಾಂವಿಧಾನಿಕ ಮೌಲ್ಯಗಳಲ್ಲಿ ನಂಬಿಕೆ ಇಟ್ಟು, ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕಲು ಶ್ರಮಿಸುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸೌಹಾರ್ದತೆಯನ್ನು ಪ್ರತಿಪಾದಿಸುತ್ತಿದೆ. ದ್ವೇಷ ಸಮಾಜವನ್ನು ಒಡೆಯುತ್ತದೆ, ಪ್ರೀತಿ ಮನಸುಗಳನ್ನು ಬೆಸೆಯುತ್ತದೆ. ಪರಧರ್ಮ ಸಹಿಷ್ಣುತೆಯನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣಲು ಸಾಧ್ಯ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read