ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಉದ್ದನ ಕಾಳು, ಹೆಸರು ಕಾಳು ಮತ್ತು ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸುವಂತೆ ಜಿಲ್ಲಾ ಕಾರ್ಯಪಡೆ ಸಮಿತಿಗಳಿಗೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಆದೇಶಿಸಿದ್ದಾರೆ.
ಹೆಸರು ಕಾಳು ಪ್ರತಿ ಕ್ವಿಂಟಾಲ್ ಗೆ 8768 ರೂ., ಉದ್ದಿನ ಕಾಳು 7800 ರೂ. ಹಾಗೂ ಸೂರ್ಯಕಾಂತಿ 7721 ರೂ. ದರ ನಿಗದಿ ಮಾಡಲಾಗಿದೆ. ಅಂತೆಯೇ ಜಿಲ್ಲಾ ಕಾರ್ಯಪಡೆ ಸಮಿತಿಗಳು ಖರೀದಿ ಏಜೆನ್ಸಿಗಳೊಂದಿಗೆ ಚರ್ಚಿಸಿ ಪ್ರಕ್ರಿಯೆ ಆರಂಭಿಸಬೇಕು. ಬೆಂಬಲ ಬೆಲೆ ಯೋಜನೆ ದುರ್ಬಳಕೆ ಮಾಡಿಕೊಳ್ಳಲು ವರ್ತಕರಿಗೆ ಅವಕಾಶ ನೀಡಬಾರದು ಎಂದು ತಿಳಿಸಿದ್ದಾರೆ.
ಗದಗ, ಧಾರವಾಡ, ಹಾವೇರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ್, ತುಮಕೂರು, ಹಾಸನ, ಮೈಸೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಹೆಸರು ಕಾಳು ಖರೀದಿಸಲಾಗುವುದು.
ಕಲಬುರಗಿ, ಬೀದರ್, ಯಾದಗಿರಿ, ಗದಗ, ಧಾರವಾಡ, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಉದ್ದಿನ ಕಾಳು ಖರೀದಿಸಲಾಗುವುದು.
ಬಳ್ಳಾರಿ, ಬಾಗಲಕೋಟೆ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ವಿಜಯನಗರ, ಮೈಸೂರು, ಯಾದಗಿರಿ, ಚಿಕ್ಕಮಗಳೂರು, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸೂರ್ಯಕಾಂತಿ ಖರೀದಿಸಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ್ ಮಾಹಿತಿ ನೀಡಿದ್ದಾರೆ.
ಖರೀದಿ ಏಜೆನ್ಸಿ ಗಳನ್ನಾಗಿ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ರಾಜ್ಯ ದ್ವಿದಳ ಧಾನ್ಯಗಳ ಅಭಿವೃದ್ಧಿ ಮಂಡಳಿಗಳನ್ನು ನೇಮಕ ಮಾಡಲಾಗಿದೆ.