ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 28ರಿಂದ ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿ ಆರಂಭವಾಗಲಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಈಗಾಗಲೇ ಎಲ್ಲಾ ಕಡೆ ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. 206 ಖರೀದಿ ಕೇಂದ್ರಗಳಲ್ಲಿ ಸೋಯಾಬೀನ್ ಖರೀದಿಸಲಾಗುವುದು. 19,325 ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಅತಿ ಹೆಚ್ಚು 116 ಖರೀದಿ ಕೇಂದ್ರ ತೆರೆದಿದ್ದು, 13000 ರೈತರು ನೋಂದಾಯಿಸಿಕೊಂಡಿದ್ದಾರೆ.
ಹೆಸರು ಕಾಳು ಖರೀದಿಗೆ 211 ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. 16,578 ರೈತರು ನೋಂದಾಯಿಸಿಕೊಂಡಿದ್ದಾರೆ. ಧಾರವಾಡದಲ್ಲಿ ಅತಿ ಹೆಚ್ಚು 6362 ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಸೂರ್ಯಕಾಂತಿ ಖರೀದಿಗೆ 120 ಖರೀದಿ ಕೇಂದ್ರಗಳನ್ನು ಆರಂಭಿಸಿದ್ದು, 5341 ರೈತರು ನೋಂದಾಯಿಸಿಕೊಂಡಿದ್ದಾರೆ. ಉದ್ದಿನ ಕಾಳು ಖರೀದಿಗೆ 134 ಖರೀದಿ ಕೇಂದ್ರ ತೆರೆಯಲಾಗಿದ್ದು, 5274 ರೈತರು ನೋಂದಾಯಿಸಿಕೊಂಡಿದ್ದಾರೆ.
