ಬೆಂಗಳೂರು: ಪ್ರಸಕ್ತ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಮೇ 15 ರಿಂದ ಒಂದು ತಿಂಗಳ ಕಾಲ ಕೈಗೊಳ್ಳಲು ಸಂಪುಟ ಸಭೆ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ವರ್ಗಾವಣೆಗೆ ಒಪ್ಪಿಗೆ ನೀಡಲಾಗಿದೆ. ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಹೆಚ್.ಕೆ. ಪಾಟೀಲ್ ಅವರು, ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇಕಡ 6ರಷ್ಟು ವರ್ಗಾವಣೆ ಪ್ರಕ್ರಿಯೆ ನಡೆಸಲು ಸಂಬಂಧಿಸಿದ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮೇ 15ರಿಂದ ಜೂನ್ 14ರ ವರೆಗೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಸಚಿವರಿಗೆ ಅಧಿಕಾರ ನೀಡಲಾಗಿದೆ. ಗ್ರೂಪ್ ಸಿ ಮತ್ತು ಡಿ ವೃಂದದವರಿಗೆ ಸಂಬಂಧಿಸಿದ ಪ್ರಾಧಿಕಾರಕ್ಕೆ ಅಧಿಕಾರ ವಹಿಸಲಾಗಿದೆ ಎಂದರು.
ವರ್ಗಾವಣೆಯ ಅವಧಿ ವಿಸ್ತರಣೆ, ಮಾರ್ಗಸೂಚಿ ಪರಿಷ್ಕರಣೆ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲು ಸಂಪುಟ ಸಭೆ ನಿರ್ಣಯಿಸಿದೆ. ಶಿಕ್ಷಣ, ಆರೋಗ್ಯ ಇತರೆ ಇಲಾಖೆಗಳಲ್ಲಿ ಇರುವಂತೆ ಇದೇ ಮೊದಲ ಬಾರಿಗೆ ಅಬಕಾರಿ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.