ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 2443 ಕೋಟಿ ರೂ. ಬಿಡುಗಡೆ ಮಾಡಿದ್ದು, ಮೂರ್ನಾಲ್ಕು ದಿನದಲ್ಲಿ ಕುಟುಂಬದ ಯಜಮಾನಿಯರ ಖಾತೆಗೆ ಹಣ ಜಮಾ ಆಗಲಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.
ಜಿಬಿಎ ವ್ಯಾಪ್ತಿಯ ಯಲಹಂಕ, ಬ್ಯಾಟರಾಯನಪುರ, ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದುವರೆಗೆ 62 ಸಾವಿರ ಯಜಮಾನಿಯರ ಬ್ಯಾಂಕ್ ಖಾತೆಗೆ ಹಣ ತಲುಪಿದ್ದು, ಇದೀಗ 32ನೇ ತಂತಿನ ಹಣ ಬಿಡುಗಡೆ ಮಾಡಲಾಗಿದೆ. ಮೂರ್ನಾಲ್ಕು ದಿನದಲ್ಲಿ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಹೇಳಿದ್ದಾರೆ.
ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆ ಪರಿಷ್ಕರಿಸಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಜಮೆ ಆಗುತ್ತಿರುವ ಮೃತ ಫಲಾನುಭವಿಗಳ ಹೆಸರನ್ನು 15 ದಿನಗಳಲ್ಲಿ ಪಟ್ಟಿಯಿಂದ ಕೈ ಬಿಡುವ ಬಗ್ಗೆ ಶೀಘ್ರವೇ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

