ಕೋಲಾರ: ರೈಲ್ವೆ ಇಲಾಖೆಗೆ ಸಂಬಂಧಿಸಿದ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಪ್ರಧಾನಿ ನರೇಂದ್ರ ಮೋದಿ ಸಮ್ಮತಿಸಿದ್ದಾರೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ರೈಲ್ವೆ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಕನ್ನಡಿಗರಿಗೆ ಅವಕಾಶ ನೀಡುವಂತೆ ನಾನು ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಪ್ರಧಾನಿ ಹಾಗೂ ಕೇಂದ್ರದ ಮೇಲೆ ಒತ್ತಡ ಹೇರಿದ್ದೆವು. ಇದಕ್ಕೆ ಪ್ರಧಾನಿ ಮೋದಿ ಸಮ್ಮತಿಸಿದ್ದಾರೆ ಎಂದು ತಿಳಿಸಿದ್ದಾರೆ.
ಕನ್ನಡದಲ್ಲಿ ರೈಲ್ವೆ ಇಲಾಖೆಯ ಬಡ್ತಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಸೋಮಣ್ಣ ಮತ್ತು ಹೆಚ್.ಡಿ. ಕುಮಾರಸ್ವಾಮಿ ಕ್ರಮ ಕೈಗೊಂಡು ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿ ಹೊಸ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಿದ್ದರು.

