ಶಿವಮೊಗ್ಗ: ಮುಂದಿನ ಶೈಕ್ಷಣಿಕ ವರ್ಷದಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪೂರ್ವ ಪ್ರಾಥಮಿಕ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಸಿಯೂಟ ಮಾತ್ರವಲ್ಲ, ಪಠ್ಯಪುಸ್ತಕ, ನೋಟ್ ಬುಕ್, ಸಾಕ್ಸ್ ಹಾಲು, ಮೊಟ್ಟೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದರಿಂದ ಸರ್ಕಾರಿ, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಕೆಜಿ, ಯುಕೆಜಿ, ಪಿಯುಸಿವರೆಗೆ ಓದುವ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಬಿಸಿಯೂಟ ಯೋಜನೆಗೆ ಹೆಚ್ಚುವರಿಯಾಗಿ 200 ಕೋಟಿ ರೂ. ವೆಚ್ಚವಾಗಲಿದೆ ಎಂದು ಹೇಳಿದ್ದಾರೆ.
ನೂತನ ಶಾಲೆಗಳು ಸೇರಿದಂತೆ ಎಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ದೈಹಿಕ ಶಿಕ್ಷಣ, ಸಂಗೀತ ಶಿಕ್ಷಕರನ್ನು ನೇಮಕ ಮಾಡಲಾಗುವುದು. ಶಾಲೆಗಳಲ್ಲಿ ಇನ್ನು ಮುಂದೆ ಬ್ಯಾಂಡ್ ಕಡ್ಡಾಯವಾಗಿರುತ್ತದೆ. ಹಾಲಿ ಸೇವೆಯಲ್ಲಿರುವ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

