ಬೆಂಗಳೂರು: ಬೆಲೆ ಕುಸಿತದಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಮೆಕ್ಕೆಜೋಳ ಬೆಳೆಗಾರರಿಗೆ ಅನುಕೂಲ ಕಲ್ಪಿಸಲು ಪಶು ಮತ್ತು ಕುಕ್ಕುಟ ಆಹಾರ ಉತ್ಪಾದನಾ ವಲಯ ಪ್ರಸ್ತಾವ ಸಲ್ಲಿಸಿ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ತಕ್ಷಣ ಪ್ರಾರಂಭಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರೊಂದಿಗೆ ಸಭೆ ನಡೆಸಿದ ಸಿಎಂ, ರಾಜ್ಯದಲ್ಲಿ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮೆಕ್ಕೆಜೋಳ ಉತ್ಪಾದನೆಯಾಗಿದೆ. ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಕ್ರಮ ಕೈಗೊಂಡಿದೆ. ಆಹಾರ ಉತ್ಪಾದಕರು ಕೇಂದ್ರ ಸರ್ಕಾರ ನಿಗದಿಪಡಿಸಿರುವ 2400 ರೂ. ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಬೇಕೆಂದು ತಿಳಿಸಿದ್ದಾರೆ.
ಕರ್ನಾಟಕ ಮಾರುಕಟ್ಟೆ ಫೆಡರೇಶನ್ ಮೂಲಕ ರೈತರಿಂದ ಮೆಕ್ಕೆಜೋಳ ಖರೀದಿಸಿ ಪೂರೈಸಲಾಗುವುದು. ಸಾಗಣೆ ವೆಚ್ಚ, ಲೋಡಿಂಗ್, ಅನ್ ಲೋಡಿಂಗ್ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಕುಕ್ಕುಟ ಉದ್ಯಮಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
