ಮಡಿಕೇರಿ: ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸಂಚಾರಿ ಇ-ಚಲನ್ ಮೂಲಕ ವಿಧಿಸಲಾಗಿರುವ ಬಾಕಿ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ಘೋಷಿಸಿದೆ. ಪೊಲೀಸ್ ಇಲಾಖೆ ಹಾಗೂ ಸಾರಿಗೆ ಇಲಾಖೆಯಲ್ಲಿ ದಾಖಲಾದ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಈ ವಿಶೇಷ ರಿಯಾಯಿತಿ ಅನ್ವಯವಾಗಲಿದೆ.
ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, 2026ರ ನವೆಂಬರ್ 21ರಿಂದ ಡಿಸೆಂಬರ್ 11ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಶೇ.50ರಷ್ಟು ರಿಯಾಯಿತಿ ಸೌಲಭ್ಯ ದೊರೆಯಲಿದೆ.
ಪೊಲೀಸ್ ಮತ್ತು ಸಾರಿಗೆ ಇಲಾಖೆ ಪ್ರಕರಣಗಳಿಗೂ ಅನ್ವಯ
ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ವ್ಯವಸ್ಥೆಯಲ್ಲಿ ದಾಖಲಾದ ಪ್ರಕರಣಗಳಿಗೆ ವಿಧಿಸಿರುವ ದಂಡದ ಮೊತ್ತಕ್ಕೆ ಈ ರಿಯಾಯಿತಿ ಅನ್ವಯವಾಗಲಿದೆ. ಇದರ ಜತೆಗೆ ಸಾರಿಗೆ ಇಲಾಖೆಯಲ್ಲಿ 1991ರಿಂದ 2025ರವರೆಗೆ ದಾಖಲಾಗಿ ವಿಧಿಸಲಾಗಿರುವ ದಂಡದ ಮೊತ್ತಕ್ಕೂ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.
ದೀರ್ಘಕಾಲದಿಂದ ಬಾಕಿ ಉಳಿಸಿಕೊಂಡಿರುವ ಸಂಚಾರಿ ದಂಡವನ್ನು ಪಾವತಿಸಲು ವಾಹನ ಸವಾರರಿಗೆ ಇದೊಂದು ಉತ್ತಮ ಅವಕಾಶವಾಗಿದೆ.
ನವೆಂಬರ್ 21ರಿಂದ ಡಿಸೆಂಬರ್ 11ರವರೆಗೆ ಮಾತ್ರ ಅವಕಾಶ
ಈ ವಿಶೇಷ ರಿಯಾಯಿತಿ ಸೀಮಿತ ಅವಧಿಗೆ ಮಾತ್ರ ಲಭ್ಯವಿರಲಿದ್ದು, ನವೆಂಬರ್ 21ರಿಂದ ಡಿಸೆಂಬರ್ 11ರೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವವರು ಮಾತ್ರ ಇದರ ಪ್ರಯೋಜನ ಪಡೆಯಬಹುದು.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು, ಸರ್ಕಾರದ ಆದೇಶದಂತೆ ನಿಗದಿತ ಅವಧಿಯಲ್ಲಿ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ವಾಹನ ಸವಾರರಿಗೆ ತಿಳಿಸಿದ್ದಾರೆ.
ಶೇ.50ರಷ್ಟು ರಿಯಾಯಿತಿಯ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಬಾಕಿ ಇರುವ ಸಂಚಾರಿ ದಂಡವನ್ನು ಪಾವತಿಸುವಂತೆ ವಾಹನ ಸವಾರರಿಗೆ ಮನವಿ ಮಾಡಲಾಗಿದೆ.
ಪರಿಸರ ಸ್ನೇಹಿಯಾಗಿ ದೀಪಾವಳಿ ಹಬ್ಬ ಆಚರಿಸಿ
ಮಡಿಕೇರಿ: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 2026 ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಅರೋಗ್ಯ ಸಂರಕ್ಷಣೆಯ ಹಿತದೃಷ್ಠಿಯಿಂದ ಭಾರತ ಸರ್ಕಾರದ ಪರಿಸರ(ಸಂರಕ್ಷಣಾ) ನಿಯಮಾವಳಿ 1986 ತಿದ್ದುಪಡಿ 1999 ಮತ್ತು 2000 ಅಡಿಯಲ್ಲಿ ನಿಗಧಿಪಡಿಸಿರುವ ಮಾನಕಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ಕೋರಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುವುದು ವಾಡಿಕೆಯಾಗಿರುತ್ತದೆ. ಪಟಾಕಿ ತಯಾರಿಕೆಯಲ್ಲಿ ಅನೇಕ ರಾಸಾಯನಿಕಗಳನ್ನು ಬಳಸಲಾಗುತ್ತದೆ. ಪಟಾಕಿಯಲ್ಲಿ ಬಳಸುವ ರಾಸಾಯಾನಿಕಗಳು ಸ್ಪೋಟ ಆಗುವ ಗುಣಗಳನ್ನು ಹೊಂದಿರುತ್ತದೆ. ಪಟಾಕಿ ಸಿಡಿಸಿದ ಮೇಲೆ ಅದರಿಂದ ಬಿಡುಗಡೆಯಾಗುವ ರಾಸಾಯಾನಿಕ ವಸ್ತುಗಳು ವಾತಾವರಣದಲ್ಲಿ ಬಿಡುಗಡೆಗೊಂಡು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.
ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವನ್ನು ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ ಹಾಗೂ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ ಮತ್ತು ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟುಮಾಡುತ್ತಿದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಬೇಕಾಗಿರುತ್ತದೆ.
ಆದರೆ ಇತ್ತೀಚಿನ ದಿನಗಳಲ್ಲಿ ಆಧುನಿಕ ಭರಾಟೆಯಲ್ಲಿ ಪಟಾಕಿಗಳನ್ನು ಸಿಡಿಸುವ ಮೂಲಕ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ರೀತಿ ಪಟಾಕಿಗಳನ್ನು ಸಿಡಿಸುವುದರಿಂದ ವಾಯು ಮಾಲಿನ್ಯವು ಹೆಚ್ಚಾಗುವುದಲ್ಲದೇ ಹೆಚ್ಚಾದ ಶಬ್ಧ ಮಾಲಿನ್ಯದಿಂದ ಮನುಷ್ಯನ ಮತ್ತು ಜೀವ ಸಂಕಲನದ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುತ್ತಿರುವುದು ದೇಶದಾದ್ಯಂತ ನಡೆಸಿದ ಅಧ್ಯಯನದಿಂದ ಸಾಬೀತಾಗಿದೆ. 2018ರ ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಸಿಎಸ್‍ಐಆರ್-ಎನ್‍ಇಇಆರ್‍ಐ ಇವರು ಶಿಫಾರಸ್ಸು ಮಾಡಿದ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಮಾನ್ಯ ಸರ್ವೋಚ್ಛ ನ್ಯಾಯಲಯವು ದಿ: 23.10.2018 ಮತ್ತು 31.10.2018 ಹಾಗೂ ತದನಂತರ ಹಲವಾರರಲ್ಲಿ ಸ್ಪಷ್ಟ ನಿರ್ದೇಶನಗಳನ್ನು ನೀಡಿರುತ್ತದೆ.
2026ರ ದೀಪಾವಳಿ ಹಬ್ಬದ ದಿನಗಳಂದು ಪಟಾಕಿಗಳಿಂದಾಗುವ ಶಬ್ಧ ಮತ್ತು ವಾಯು ಮಾಲಿನ್ಯವನ್ನು ನಿಯಂತ್ರಿಸಲು ಸರ್ವೋಚ್ಛ ನ್ಯಾಯಲಯದ ಆದೇಶದಂತೆ ಕ್ರಮಜರುಗಿಸಲು ಸೂಚಿಸಲಾಗಿದೆ.
ಸರ್ವೋಚ್ಚ ನ್ಯಾಯಾಲಯವು ನೀಡಿದ ನಿರ್ದೇಶನದಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿರುತ್ತದೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳನ್ನು ಸಂಬಂಧ ಪಟ್ಟ ಎಲ್ಲಾ ಇಲಾಖೆಯ ಅನುಮತಿ ಪಡೆಯತಕ್ಕದ್ದು.
125 ಡೆಸಿಬಲ್ ಗಳಿಗಿಂತ ಹೆಚ್ಚು ಶಬ್ಧ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಉಪಯೋಗಿಸುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯವು ಸಮಯ ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದೆ.
ಸರ್ವೋಚ್ಛ ನ್ಯಾಯಾಲಯ ಹಾಗೂ ಹಸಿರು ನ್ಯಾಯ ಪೀಠ, ನವದೆಹಲಿ ರವರ ಆದೇಶದಂತೆ ಎಲ್ಲಾ ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂ.ಆರ್ ಕೋಡ್ ಇರುವ ಹಸಿರು ಪಟಾಕಿ (ಕಡಿಮೆ ಮಾಲಿನ್ಯ ಉಂಟುಮಾಡುವ) ಗಳನ್ನು ಮಾತ್ರ ಮಾರಾಟ ಮಾಡುವುದು.
ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ಅವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗುವಂತೆ ಬಳಸಬೇಕು.
ಹಸಿರು ಪಟಾಕಿ ಅಂಗಡಿಗಳಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು ಬಳಸುವಂತಿಲ್ಲ. ದಿನದ ಯಾವುದೇ ಸಮಯದಲ್ಲಿ ನಿಶಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳಲ್ಲಿ(ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ, ವೃದ್ಧಾಶ್ರಮ ಇತ್ಯಾದಿಗಳು) ಸುತ್ತಮುತ್ತ ಯಾವುದೇ ರೀತಿಯ ಶಬ್ದ ಉಂಟುಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳ ಬಳಕೆಯನ್ನು ನಿಷೇಧಿಸಲಾಗಿದೆ.
ಈ ಯಾವುದೇ ಕ್ರಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಲ್ಲಿ, ಅದಕ್ಕೆ ಕಾರಣರಾದವರ ಮೇಲೆ ಕಾಯ್ದೆಯನುಸಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗುವುದು. ಆದ್ದರಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ ಹಾಗೂ ವಾಯು ಮಾಲಿನ್ಯ ನಿಯಂತ್ರಣದಲ್ಲಿಟ್ಟು ಹಬ್ಬವನ್ನು “ಹಸಿರು ದೀಪಾವಳಿ-ಸ್ವಸ್ಥ ದೀಪಾವಳಿ: ಪರಿಸರ ಸ್ನೇಹಿ ದೀಪಾವಳಿ” ಯನ್ನಾಗಿ ಆಚರಿಸಲು ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕೋರಿದ್ದಾರೆ.

