ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ವಯೋಮಿತಿ ಸಡಿಲಿಕೆಯ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸುಳಿವು ನೀಡಿದ್ದು, ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಅನೇಕ ವರ್ಷಗಳಿಂದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ನಡೆದಿಲ್ಲ. ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ವಯೋಮಿತಿ ಸಡಿಲಿಕೆ ಬಗ್ಗೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ವಯೋಮಿತಿ ಏನಿದೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಆಕಾಂಕ್ಷಿಗಳು ಎರಡರಿಂದ ಮೂರು ವರ್ಷ ವಯೋಮಿತಿ ಹೆಚ್ಚಳ ಮಾಡಿಕೊಡಲು ಬೇಡಿಕೆ ಇಟ್ಟಿದ್ದು, ಅನೇಕ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ. ವಯೋಮಿತಿ ಸಡಿಲಿಕೆ ಸಂಬಂಧ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಬೇರೆ ರಾಜ್ಯಗಳಲ್ಲಿ ವಯೋಮಿತಿ ಎಷ್ಟು ವರ್ಷ ಇದೆ ಎಂಬ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದ್ದು, ಪ್ರಸ್ತಾವನೆ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.