HomeLatest Newsಬಡ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ’ದೀಪಿಕಾ ವಿದ್ಯಾರ್ಥಿ ವೇತನ’ ಯೋಜನೆಯಡಿ ಪ್ರತಿ ವರ್ಷ 30 ಸಾವಿರ...

ಬಡ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ’ದೀಪಿಕಾ ವಿದ್ಯಾರ್ಥಿ ವೇತನ’ ಯೋಜನೆಯಡಿ ಪ್ರತಿ ವರ್ಷ 30 ಸಾವಿರ ರೂ.

ಬೆಂಗಳೂರು: ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಾರ್ಷಿಕ 30,000 ರೂ. ದಂತೆ ಒಟ್ಟು 37,000 ವಿದ್ಯಾರ್ಥಿನಿಯರಿಗೆ ’ದೀಪಿಕಾ ವಿದ್ಯಾರ್ಥಿ ವೇತನ’ನೀಡುವ ಈ ಯೋಜನೆಯಿಂದ ಬಡಹೆಣ್ಣುಮಕ್ಕಳಿಗೆ ಹೆಚ್ಚಿನ ಲಾಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ರಾಜ್ಯದ ವಿದ್ಯಾರ್ಥಿನಿಯರಿಗಾಗಿ ಅಜೀಂ ಪ್ರೇಮ್ ಜೀ ಫೌಂಡೇಶನ್ ನವರು ಕೊಡಮಾಡುತ್ತಿರುವ ’ದೀಪಿಕಾ ವಿದ್ಯಾರ್ಥಿ ವೇತನ’ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಮ್ಮ ರಾಜ್ಯದ ಪ್ರತಿಷ್ಠಿತ ಐಟಿ ದಿಗ್ಗಜರಾದ ಅಜೀಂ ಪ್ರೇಂಜಿ ಅವರು ಅಜೀಂ ಪ್ರೇಂಜಿ ಫೌಂಡೇಶನ್ ನ  ಮೂಲಕ ಅನೇಕ ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಪೂರೈಸುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣದಲ್ಲಿ ತೊಡಗುವಂತಾಗುವ ದೃಷ್ಠಿಯಿಂದ ‘’ದೀಪಿಕಾ ವಿದ್ಯಾರ್ಥಿ ವೇತನ’ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ ರೂ.30,000/- ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್ ನಿಂದ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿನಿಯರು ಹತ್ತನೇ ತರಗತಿಯನ್ನು ಮತ್ತು 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು. ಈ ಯೋಜನೆಯ ಲಾಭ ಪಡೆಯಬೇಕಾದರೆ, ವಿದ್ಯಾರ್ಥಿನಿಯರು ಪ್ರತಿ ವರ್ಷ ತಪ್ಪದೇ ಉತೀರ್ಣರಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಮಕ್ಕಳಾಗಿದ್ದು, ಇಂತಹ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲೆಂಬ ಸದುದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಿದ್ದಾರೆ.

ನಮ್ಮ ದೇಶದಲ್ಲಿ ಹಿಂದಿನಿಂದಲೂ ಶೂದ್ರರಂತೆ, ಹೆಣ್ಣುಮಕ್ಕಳೂ ಸಹ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಶಿಕ್ಷಣ ಪಡೆದ ಹೆಣ್ಣುಮಕ್ಕಳ ಸರಾಸರಿ, ರಾಷ್ಟ್ರೀಯ ಶಿಕ್ಷಿತರ ಸರಾಸರಿಗಿಂತ ಕಡಿಮೆಯಿದೆ. ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಿತರಾಗಬೇಕೆಂಬ ಸರ್ಕಾರದ ಉದ್ದೇಶದಲ್ಲಿ ಕೈಜೋಡಿಸಿರುವ ಅಜೀಂ ಪ್ರೇಮ್ ಜೀ ಅವರಿಗೆ ಅಭಿನಂದನೆಗಳು.

ಹೆಣ್ಣುಮಕ್ಕಳು ಬಾಲ್ಯ ವಿವಾಹ, ಬಾಲ ಗರ್ಭಿಣಿಯರ ಸಮಸ್ಯೆ, ಪೋಕ್ಸೋ ಸಮಸ್ಯೆಗಳು, ಬಾಲ ಕಾರ್ಮಿಕ ಪದ್ಧತಿಗಳಿಗೆ ಬಲಿಯಾಗುತ್ತಿದ್ದಾರೆ. ಆದ್ದರಿಂದ ಹೆಣ್ಣುಮಕ್ಕಳಿಗೆ ಶಿಕ್ಷಣ ಅತ್ಯಗತ್ಯ. ಮಹಿಳೆಯರು ಸ್ವಾವಲಂಬಿಗಳಾಗಲು ವಿದ್ಯೆ ಅತ್ಯವಶ್ಯ. ನಮ್ಮ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತದೆ. ಮಹಿಳೆಯರಿಗೆ ಶಿಕ್ಷಣ ದೊರೆತರೆ, ಸಮಾಜದ ಸವಾಲುಗಳನ್ನು ಎದುರಿಸಲು ಸಮರ್ಥರಾಗುತ್ತಾರೆ.

ಸಮಾಜದಲ್ಲಿನ ಅಸಮಾನತೆಯನ್ನು ನಿವಾರಿಸದ ಹೊರತು ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ. ಸಮಾಜದಲ್ಲಿ ಮೂಢನಂಬಿಕೆ ಹಾಗೂ ಮೌಢ್ಯಗಳ ನಿವಾರಣೆಯಾಗಲು ವೈಚಾರಿಕತೆ ಹಾಗೂ ವೈಜ್ಞಾನಿಕ ಶಿಕ್ಷಣ ಅಗತ್ಯ. ಇಂತಹ ಅಜ್ಞಾನದ ಲಾಭವನ್ನು ಪಟ್ಟಭದ್ರಹಿತಾಸಕ್ತಿಗಳು ಪಡೆಯುತ್ತಿದ್ದು, ಇದರಿಂದ ಪಾರಾಗಲು ಶಿಕ್ಷಣವಿರಬೇಕು.

ಮಹಾತ್ಮಾ ಗಾಂಧೀಜಿಯವರು ‘ನೀವು ಗಳಿಸಿದ ಸಂಪತ್ತು ಸಮಾಜದ ಒಳಿತಿಗೆ ಬಳಕೆಯಾಗಬೇಕು’ಎಂದಂತೆ ಅಜೀಂಪ್ರೇಂ ಜೀ ಅವರು ತಾವು ಗಳಿಸಿದ ಸಂಪತ್ತನ್ನು ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಿರುವುದು ಸ್ವಾಗತಾರ್ಹ. ಕರ್ನಾಟಕದಲ್ಲಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಮೊಟ್ಟೆ ಕೊಡುವ 1,500 ಕೋಟಿ ರೂಪಾಯಿಗಳ ಯೋಜನೆಗೆ ಕಳೆದ ವರ್ಷ ಒಡಂಬಡಿಕೆ ಮಾಡಿಕೊಂಡಿದ್ದೆವು. ಈ ವರ್ಷ ಉನ್ನತ ಶಿಕ್ಷಣಕ್ಕೆ ಬರುವ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿ ವೇತನದ ರೂಪದಲ್ಲಿ ನೆರವು ನೀಡಲು ಮುಂದೆ ಬಂದಿದ್ದಾರೆ. ಇದು ಸಂತೋಷದ ವಿಷಯ ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular