ಕೊಪ್ಪಳ: ಪಿಎಸ್ಐ ನೇಮಕಾತಿ ಹಗರಣದ ನಂತರ ಐದು ವರ್ಷ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ ಒಂದು ಸಾವಿರ ಪಿಎಸ್ಐ ಹುದ್ದೆಗಳು ಖಾಲಿ ಇದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭಾನುವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 500 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ನಡೆದಿದ್ದು, ಅವರು ತರಬೇತಿ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ 8000 ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇವೆ. ಆದ್ಯತೆಯ ಮೇರೆಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.