ಬೆಂಗಳೂರು: ರಾಜ್ಯ ಸರ್ಕಾರ ಪಿಯು ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಕಳೆದ ವರ್ಷ ಜಾರಿಗೊಳಿಸಿದ್ದ ವಿದ್ಯಾವಿಜೇತ ಕಾರ್ಯಕ್ರಮವನ್ನು 2025- 26 ನೇ ಸಾಲಿನಲ್ಲಿಯೂ ಮುಂದುವರೆಸಲು ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ವಿದ್ಯಾ ವಿಜೇತ ಕಾರ್ಯಕ್ರಮ ಅನುಷ್ಠಾನಕ್ಕೆ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ನಿರ್ದೇಶಕರಿಗೆ ವಿವಿಧ ಲೆಕ್ಕ ಶೀರ್ಷಿಕೆಯಡಿ ಒದಗಿಸಿರುವ ಅನುದಾನದಿಂದ ಮೊದಲ ಹಂತದಲ್ಲಿ 3.81 ಕೋಟಿ ರೂ. ಅನುದಾನ ಬಳಕೆ ಮಾಡಲು ಸರ್ಕಾರ ಅನುಮತಿ ನೀಡಿದೆ.
ಕಳೆದ ಸಾಲಿನಲ್ಲಿ ಸರ್ಕಾರಿ ಪಿಯು ಕಾಲೇಜಿನ 25,000 ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಾಗಿತ್ತು. ಇದಕ್ಕಾಗಿ 12.5 ಕೋಟಿ ರೂ. ವೆಚ್ಚ ಮಾಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 25 ಸಾವಿರ ವಿದ್ಯಾರ್ಥಿಗಳಿಗೆ ಈ ತರಬೇತಿ ನೀಡುವುದಾಗಿ ಕಳೆದ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಅಂತೆಯೇ ಈ ವರ್ಷವೂ ಸರ್ಕಾರಿ ಕಾಲೇಜುಗಳಲ್ಲಿ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ವಿದ್ಯಾ ವಿಜೇತ ಕಾರ್ಯಕ್ರಮ ಮುಂದುವರೆಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.