ಬೆಂಗಳೂರು: ಮುಂದಿನ ವರ್ಷದಿಂದ ನೈತಿಕ ಶಿಕ್ಷಣವನ್ನು ಪ್ರತ್ಯೇಕ ವಿಷಯವಾಗಿ ಪರಿಚಯಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಮ್ಮ ಸರ್ಕಾರ 18000 ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5000 ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಕೆಪಿಎಸ್ ಶಾಲೆಗಳ ಸಂಖ್ಯೆಯನ್ನು 800 ಕ್ಕೆ ಹೆಚ್ಚಳ ಮಾಡಲಾಗಿದೆ. ಎಲ್ಕೆಜಿ ಶಾಲೆಗಳ ಸಂಖ್ಯೆಯನ್ನು 1 ಸಾವಿರದಿಂದ 4ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. ಶಾಲಾ ಮಕ್ಕಳಿಗೆ ವಾರದ ಎಲ್ಲಾ ದಿನಗಳಂದು ಮೊಟ್ಟೆ ನೀಡಲಾಗುತ್ತಿದೆ. 50 ಪಿಯು ಕಾಲೇಜು, ಪ್ರೌಢಶಾಲೆಗಳಿಗೆ ಅನುಮೋದನೆ ನೀಡಲಾಗಿದ್ದು, ಅಡುಗೆ ಸಿಬ್ಬಂದಿ ಗೌರವಧನ ಹೆಚ್ಚಳಕ್ಕೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.