ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶೀಘ್ರದಲ್ಲಿ ಮುಂಬಡ್ತಿ ನೀಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
2017ರ ಮೊದಲು ಪ್ರಾಥಮಿಕ ಶಾಲೆ ಶಿಕ್ಷಕರಾಗಿ ನೇಮಕಗೊಂಡವರಿಗೆ ಒಂದರಿಂದ ಐದನೇ ತರಗತಿವರೆಗೆ ಮಾತ್ರ ಬೋಧನೆಗೆ ಸೀಮಿತಗೊಳಿಸಿ ಹಿಂಬಡ್ತಿಯಿಂದಾಗಿರುವ ಅನ್ಯಾಯ ಸರಿಪಡಿಸುವ ಕುರಿತಾಗಿ ಗುರುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಆದರೆ ಅಂತಿಮ ತೀರ್ಮಾನ ಕೈಗೊಂಡಿಲ್ಲ.
ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಏಳನೇ ತರಗತಿವರೆಗೆ ಬೋಧನೆಗೆ ಅವಕಾಶ ನೀಡಿ ಒಂದು ವೇತನ ಬೇಡಿಕೆ ಎಂಟು ವರ್ಷಗಳಿಂದ ಇದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದ್ದು, ಕೆಲವು ಕಾನೂನು ಅಂಶಗಳ ವಿಚಾರವಾಗಿ ಕಾನೂನು ಇಲಾಖೆಯ ಅಭಿಪ್ರಾಯ ಕೇಳಲಾಗಿದೆ. ಕಾನೂನು ಇಲಾಖೆ ಅಭಿಪ್ರಾಯ ಪಡೆದುಕೊಂಡು ಮುಂದಿನ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.