ಬೆಂಗಳೂರು: ಶಿಕ್ಷಕರ ಬೇಡಿಕೆಗಳ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ ಪರಿಹಾರ ಒದಗಿಸಲು ಪ್ರಯತ್ನಿಸುವುದಾಗಿ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸೆ. 3ರಂದು ನಡೆಸಲು ಉದ್ದೇಶಿಸಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಿಳಿಸಿದೆ.
ಸೇವಾನಿರತ ಶಿಕ್ಷಕರಲ್ಲಿ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ ಪದವೀಧರ ಎಂದು ಪದನಾಮೀಕರಿಸುವುದು ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕು, ಜಿಲ್ಲಾ ಹಂತದ ಪ್ರತಿಭಟನೆ ನಡೆಸಿದ್ದು, ಮುಂದಿನ ಹಂತವಾಗಿ ಸೆ. 3ರಂದು ರಾಜ್ಯಮಟ್ಟದ ಹೋರಾಟ ಕೈಗೊಳ್ಳಲಾಗಿತ್ತು.
ಈ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಪಿಯು ಕಚೇರಿಯಲ್ಲಿ ಶಿಕ್ಷಕರ ಸಂಘದ ಮುಖಂಡರೊಂದಿಗೆ ಸಚಿವ ಮಧು ಬಂಗಾರಪ್ಪ ಸಭೆ ನಡೆಸಿದ್ದಾರೆ. ರಾಜ್ಯ ಸರ್ಕಾರ ನಿಮ್ಮ ಜೊತೆಯಲ್ಲಿ ಇರುತ್ತದೆ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಹೇಳಿದ್ದಾರೆ.
ಶಿಕ್ಷಕರ ಬೇಡಿಕೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಶಾಲಾ ಶಿಕ್ಷಣ ಇಲಾಖೆ ಸದಾ ಶಿಕ್ಷಕರ ಜೊತೆಗೆ ನಿಲ್ಲುವುದು ಎಂದು ಭರವಸೆ ನೀಡಿದರು. ಅಲ್ಲದೇ, ಈ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತರುತ್ತೇವೆ. ಸಚಿವ ಸಂಪುಟ ಸಭೆಯಲ್ಲಿ ಸಕಾರಾತ್ಮಕ ನಿರ್ಧಾರದ ನಿರೀಕ್ಷೆಯಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಸಚಿವರು, ಮುಷ್ಕರಕ್ಕೆ ಕೈಗೊಳ್ಳಬಾರದೆಂದು ಹೇಳಿದ್ದಾರೆ.
ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಲಲಿ ಅವರ ನೇತೃತ್ವದಲ್ಲಿ ಹಲವು ಪ್ರತಿನಿಧಿಗಳು ಸಚಿವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಮಂಡಿಸಿದರು. ಬೇಡಿಕೆ ಈಡೇರಿಸುವ ಭರವಸೆಯ ಆಧಾರದ ಮೇಲೆ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ. ಬೇಡಿಕೆ ಈಡೇರಿಸದಿದ್ದರೆ ಸಭೆ ಕರೆದು ಹೋರಾಟದ ದಿನಾಂಕ ನಿಗದಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ. ವಿ. ತ್ರಿಲೋಕ್ ಚಂದ್ರ ಉಪಸ್ಥಿತರಿದ್ದರು.