ಮಡಿಕೇರಿ: ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನರಿಗೆ ಭರವಸೆ ನೀಡಿದಂತೆ ‘ಪಂಚ ಗ್ಯಾರಂಟಿ’ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಎಲ್ಲಾ ಜನರಿಗೆ ಒಂದಲ್ಲ ಒಂದು ಸೌಲಭ್ಯಗಳು ತಲುಪುವಂತೆ ಮಾಡುವಲ್ಲಿ ಸರ್ಕಾರ ಶ್ರಮಿಸುತ್ತಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಗಾರ ಮತ್ತು ಗ್ಯಾರಂಟಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯದಲ್ಲಿ 4 ಲಕ್ಷ ಕೋಟಿ ಬಜೆಟ್ನಲ್ಲಿ 55 ಸಾವಿರ ಕೋಟಿ ರೂ.ವನ್ನು ವಾರ್ಷಿಕವಾಗಿ ಗ್ಯಾರಂಟಿ ಯೋಜನೆಗೆ ಬಳಸಲಾಗುತ್ತಿದೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 600 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಪ್ರತಿನಿತ್ಯ ಜಿಲ್ಲೆಯಲ್ಲಿ 16 ಸಾವಿರ ಮಂದಿ ಬಸ್ನಲ್ಲಿ ಸಂಚರಿಸುತ್ತಿದ್ದಾರೆ ಎಂದರು.
ಮುಂದಿನ ಜನವರಿಯಿಂದ ‘ಇಂದಿರಾ ಆಹಾರ ಕಿಟ್’ಯೋಜನೆ ಜಾರಿಗೆ ಬರಲಿದ್ದು, ಬಡ ಜನರ ಆರ್ಥಿಕ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಸರ್ಕಾರ ಜಿಲ್ಲೆಯ ಎರಡು ಕ್ಷೇತ್ರಗಳಿಗೂ ತಲಾ 55 ಕೋಟಿ ರೂ. ನೀಡಿದೆ. ಹಾಗೆಯೇ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಗಮನಹರಿಸಲಾಗಿದೆ ಎಂದು ವಿವರಿಸಿದರು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಶಾಸಕ ಡಾ.ಮಂತರ್ ಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಮೆಹರೂಜ್ ಖಾನ್ ಇತರರು ಇದ್ದರು.
