ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ಅವಧಿಯನ್ನು ಮೇ ತಿಂಗಳ ಅಂತ್ಯದವರೆಗೆ ವಿಸ್ತರಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ನಿಗದಿತ ಖರೀದಿ ಪ್ರಮಾಣ ಇನ್ನೂ ಆಗದ ಕಾರಣ ಖರೀದಿ ಅವಧಿ ವಿಸ್ತರಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಈ ತಿಂಗಳ ಅಂತ್ಯದವರೆಗೆ ತೊಗರಿ ಖರೀದಿ ಅವಧಿ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 3.06 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಅನುಮತಿ ನೀಡಿದೆ. ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ಇದುವರೆಗೆ 1.83 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಸಿದ್ದು, ಇನ್ನೂ 2. 70 ಲಕ್ಷ ಮೆಟ್ರಿಕ್ ಟನ್ ಪ್ರಮಾಣದಷ್ಟು ತೊಗರಿ ಮಾರಾಟಕ್ಕೆ ರೈತರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಸುಮಾರು 93 ಸಾವಿರ ಮೆಟ್ರಿಕ್ ಟನ್ ತೊಗರಿ ಖರೀದಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಪ್ರತಿ ಕ್ವಿಂಟಾಲ್ ಗೆ ನಿಗದಿಪಡಿಸಿರುವ 7550 ರೂ. ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ 450 ರೂಪಾಯಿ ಪ್ರೋತ್ಸಾಹ ಧನ ನೀಡುತ್ತಿದ್ದು, ಒಟ್ಟು ಪ್ರತಿ ಕ್ವಿಂಟಾಲ್ ಗೆ 8,000 ರೂ.ನಂತೆ ತೊಗರಿ ಖರೀದಿಸಲಾಗುತ್ತಿದೆ. ರೈತರು ಈ ಅವಕಾಶ ಬಳಸಿಕೊಂಡು ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ತೊಗರಿ ಮಾರಾಟ ಮಾಡಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.