ಬೆಂಗಳೂರು: ತಾಯಿ, ನವಜಾತ ಶಿಶುಗಳ ಸಾವಿನ ಪ್ರಮಾಣ ತಗ್ಗಿಸಲು ತಾಲೂಕು ಮಟ್ಟದ ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆ ಮತ್ತು ಹೆಚ್ಚು ಹೆರಿಗೆಯಾಗುವ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದಿನದ 24 ಗಂಟೆಯೂ ತಜ್ಞ ವೈದ್ಯರು ಮತ್ತು ಇತರೆ ಸಿಬ್ಬಂದಿ ಲಭ್ಯ ಇರುವಂತೆ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ತಾಲೂಕು ಆಸ್ಪತ್ರೆಗಳಲ್ಲಿ ತಲಾ ಒಬ್ಬರು ಸ್ತ್ರೀರೋಗ ತಜ್ಞರು, ಅರವಳಿಕೆ ತಜ್ಞರು, ಮಕ್ಕಳ ತಜ್ಞರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಲ್ಲಿ ಒಬ್ಬರು ಅಲಭ್ಯರಾದರೂ ಹೆರಿಗೆ ಸೇರಿ ಇತರೆ ಸೇವೆಯಲ್ಲಿ ವ್ಯತ್ಯಯವಾಗುತ್ತದೆ. ಇದನ್ನು ತಪ್ಪಿಸಲು ಇನ್ನು ಮುಂದೆ ತಾಲೂಕು ಆಸ್ಪತ್ರೆ, ಹೆಚ್ಚಿನ ಹೆರಿಗೆಯಾಗುವ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ಪಾಳಿಯಲ್ಲಿ ತಲಾ ಇಬ್ಬರು ಸ್ತ್ರೀರೋಗ ತಜ್ಞರು, ಅರವಳಿಕೆ ಮತ್ತು ಮಕ್ಕಳ ತಜ್ಞರು ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಲಾಗಿದೆ.
ಒಂದು ಲಕ್ಷಕ್ಕೆ 60 ಮಂದಿ ತಾಯಂದಿರು ಮರಣ ಹೊಂದುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲಿ ತಾಯಂದಿರ ಮರಣ ಸಂಖ್ಯೆ ಹೆಚ್ಚಾಗಿದೆ. ಇದನ್ನು ತಡೆಯುವ ಉದ್ದೇಶದಿಂದ ತಾಲೂಕು ಮಟ್ಟದ 148 ಆಸ್ಪತ್ರೆಗಳಲ್ಲಿ ದಿನದ 24 ಗಂಟೆಯೂ ಸ್ತ್ರೀರೋಗ, ಅರವಳಿಕೆ ಮತ್ತು ಮಕ್ಕಳ ತಜ್ಞರು ಇರುವಂತೆ ನೋಡಿಕೊಳ್ಳಲಾಗಿದೆ. ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ 24 ಗಂಟೆಯೂ ಪಾಳಿಗಳಲ್ಲಿ ತಜ್ಞ ವೈದ್ಯರು ಕಾರ್ಯನಿರ್ವಹಿಸಲಿದ್ದಾರೆ. ತಜ್ಞ ವೈದ್ಯರ ಸಂಖ್ಯೆಯನ್ನು ಹೆಚ್ಚಿಸುವ ಜೊತೆಗೆ ಕೊರತೆ ಇರುವ ಕಡೆ ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.