ಬೆಂಗಳೂರು: 30*40 ಒಳಗಿರುವ ಮನೆಗಳಿಗೆ ಓಸಿ ವಿನಾಯಿತಿ ನೀಡಿ ವಿದ್ಯುತ್, ನೀರಿನ ಸಂಪರ್ಕ ಸುಗಮಗೊಳಿಸುವ ಬೆಂಗಳೂರು ನೀತಿಯನ್ನು ರಾಜ್ಯಕ್ಕೆ ವಿಸ್ತರಣೆ ಮಾಡಲಾಗಿದೆ.
ರಾಜ್ಯದ ಇತರೆ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಿಸಿದ ನೆಲ, ಎರಡು ಅಂತಸ್ತು, ಸ್ಟಿಲ್ಟ್ ಮತ್ತು ಮೂರು ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ ವಿನಾಯಿತಿ ನೀಡಿ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ.
ಇತ್ತೀಚೆಗಷ್ಟೇ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣದವರೆಗೆ ನಿರ್ಮಾಣ ಮಾಡಿದ ನೆಲ ಮತ್ತು 2 ಅಂತಸ್ತು, ಸ್ಟಿಲ್ಟ್, 3 ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ ವಿನಾಯಿತಿ ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಗುರುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಇತರೆ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ 1,200 ಚದರ ಅಡಿ ವಿಸ್ತೀರ್ಣದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ ವಿನಾಯಿತಿ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಮಾದರಿಯಲ್ಲಿ ನಕ್ಷೆ ಮಂಜೂರಾತಿ ಪಡೆಯದ ಕಟ್ಟಡಗಳಿಗೆ ವಿನಾಯಿತಿ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆ.
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಕುರಿತು ನಿರ್ಣಯ ಬೇಡ. ಅನುಷ್ಠಾನದ ವೇಳೆ ಅಥವಾ ಸರ್ಕಾರಿ ಆದೇಶದ ವೇಳೆ ನಕ್ಷೆ ಮಂಜೂರಾತಿ ಪಡೆಯದ ನಿರ್ದಿಷ್ಟ ಕಟ್ಟಡಗಳಿಗೂ ವಿನಾಯಿತಿ ನೀಡಲು ಕ್ರಮ ಕೈಗೊಳ್ಳಬಹುದು ಎನ್ನುವ ಅಭಿಪ್ರಾಯ ವ್ಯಕ್ತವಾಗಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ.