ಹೊಸಪೇಟೆ: ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಗಳು ಸ್ಥಳದಲೇ ಮೃತಪಟ್ಟಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ.
ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕಮಲಾಪುರದ ಕೃಷ್ಣ (26) ಹಾಗೂ ವೆಂಕಟಾಪುರದ ಹನುಮಂತಪ್ಪ (50) ಮೃತ ಫಾರೆಸ್ಟ್ ವಾಚರ್ ಗಳು.
ರಾತ್ರಿ ಪಾಳಿ ಮುಗಿಸಿ ಮನೆಗೆ ವಾಪಾಸ್ ಆಗುತ್ತಿದ್ದಾಗ ವೆಂಕಟಾಪುರ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

