ಶಿವಮೊಗ್ಗ: ರಾಜ್ಯದ ಗಡಿಭಾಗ ಮತ್ತು ಕಾಡಂಚಿನ ಗ್ರಾಮಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರಿಗೆ ಹೆಚ್ಚುವರಿ ವೇತನ ಭತ್ಯ ನೀಡಲು ಸರ್ಕಾರ ನಿರ್ಧರಿಸಿದೆ. ಹಣಕಾಸು ಇಲಾಖೆಗೆ ಈ ಕುರಿತಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆಗಳಲ್ಲಿ ಲ್ಯಾಬ್ ಟೆಕ್ನಿಷಿಯನ್, ಡಿ ಗ್ರೂಪ್ ನೌಕರರ ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒಪ್ಪಿಗೆ ನೀಡಿದ್ದಾರೆ. ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಆಯುಷ್ಮಾನ್ ಭಾರತ್ ಯೋಜನೆಯಡಿ ಬಡತನ ರೇಖೆಯ ಕೆಳಗಿನ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ಕಡೆಗಳಲ್ಲಿ ಚಿಕಿತ್ಸೆಗೆ ದಾಖಲಾದ ವ್ಯಕ್ತಿಯಿಂದ ಚಿಕಿತ್ಸೆ ನೀಡಿದ ಬಗ್ಗೆ ಹಣ ವಸೂಲಾತಿ ಮಾಡುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಅಂತಹ ಘಟನೆಗಳು ಮರುಕಳಿಸಿ ದೂರುಗಳು ದಾಖಲಾದಲ್ಲಿ ಅಂತಹ ಅಧಿಕಾರಿ-ಸಿಬ್ಬಂಧಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಆಯುಷ್ಮಾನ್ ಯೋಜನೆಯ ನೋಂದಣಿ ಸಂದರ್ಭದಲ್ಲಿ ತಾಂತ್ರಿಕ ಸಮಸ್ಯೆಗಳ ನೆಪವೊಡ್ಡಿ, ಸಾರ್ವಜನಿಕರಿಗೆ ಅನಗತ್ಯ ಕಿರಿಕಿರಿ ಉಂಟು ಮಾಡುತ್ತಿರುವುದು ಕಂಡುಬಂದಿದೆ. ಇಂತಹ ವಿಷಯಗಳಲ್ಲಿ ದೂರುಗಳು ದಾಖಲಾದಲ್ಲಿ ʼಆರೋಗ್ಯಮಿತ್ರʼ ಸಿಬ್ಬಂಧಿ ಮತ್ತು ಸಂಬಂಧಿಸಿದ ಕಾರ್ಯಕ್ರಮ ಸಂಯೋಜಕರ ವಿರುದ್ದ ಕ್ರಮ ಅನಿವಾರ್ಯವಾಗಲಿದೆ ಎಂದ ಅವರು ಆರೋಗ್ಯ ಇಲಾಖೆಯ ಎಲ್ಲಾ ಹಂತದ ಅಧಿಕಾರಿ ಸಿಬ್ಬಂಧಿಗಳು ತಮ್ಮ ಜವಾಭ್ದಾರಿಯರಿತು ಪ್ರಾಮಾಣಿಕವಾಗಿ ಸಾರ್ವಜನಿಕ ಸೇವೆ ಸಲ್ಲಿಸುವಂತೆ ಸೂಚನೆ ನೀಡಿದರು.

