ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಘಟಕದ ಅಧ್ಯಕ್ಷ ಡಾ. ಮಹೇಶ್ ಜೋಶಿ ಅವರ ವಿರುದ್ಧ ಕೇಳಿ ಬಂದಿರುವ ದೂರುಗಳ ಬಗ್ಗೆ ಸಮಗ್ರ ತನಿಖೆ ನಡೆಸಿ 30 ದಿನಗಳಲ್ಲಿ ವರದಿ ಸಲ್ಲಿಸಲು ಆರು ಮಂದಿ ಅಧಿಕಾರಿಗಳ ಒಳಗೊಂಡ ಸಮಿತಿ ರಚಿಸಿ ಸರ್ಕಾರ ಆದೇಶಿಸಿದೆ.
ಸಹಕಾರ ಸಂಘಗಳ ನಿಬಂಧಕರು, ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಶಾಖೆಯ ಜಂಟಿ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕರು(ಸಾಮಾನ್ಯ), ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕರು, ಕೇಂದ್ರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಲೆಕ್ಕಪತ್ರ ಅಧಿಕಾರಿ ಮತ್ತು ಪತ್ರಾಂಕಿತ ವ್ಯವಸ್ಥಾಪಕರು ಈ ಸಮಿತಿಯಲ್ಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಡಾ. ಮಹೇಶ್ ಜೋಶಿ ಅವರ ಅಧಿಕಾರ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ವ್ಯವಹಾರ, ಪರಿಷತ್ತಿನ ಸದಸ್ಯರಿಗೆ ವಿನಾಕಾರಣ ನೋಟಿಸ್ ನೀಡಿ ಕಿರುಕುಳ ನೀಡುತ್ತಿರುವುದು, ಸರ್ವಾಧಿಕಾರಿ ಧೋರಣೆ ವಿರುದ್ಧ ತನಿಖೆ ನಡೆಸುವಂತೆ ಅನೇಕ ದೂರು ಸಲ್ಲಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ತನಿಖೆಗೆ ಸಮಿತಿ ರಚಿಸಿದ್ದು 30 ದಿನದಲ್ಲಿ ವರದಿ ಸಲ್ಲಿಸಲು ಆದೇಶಿಸಿದೆ.