ಕೊಪ್ಪಳ: ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆಪಿಎಸ್) ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.
ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳು ಓದುತ್ತಿದ್ದಾರೆ. ಎಲ್‌ಕೆಜಿಯಿಂದ ಪಿಯುಸಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಈ ಶಾಲೆಯ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತವಾಗಿ ಬಸ್ ವ್ಯವಸ್ಥೆ ಆರಂಭಿಸಲು ಸರ್ಕಾರ ತೀರ್ಮಾನ ನಿರ್ಧಾರ ಕೈಗೊಂಡಿದೆ. ಯಾವ ಭಾಗದಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಉಚಿತ ಬಸ್ ವ್ಯವಸ್ಥೆಗಳನ್ನು ಮೊದಲು ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಅನೇಕ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದು, 57 ಲಕ್ಷ ಮಕ್ಕಳು ಓದುತ್ತಿದ್ದಾರೆ. ಅವರೆಲ್ಲರ ಅಭಿವೃದ್ಧಿಗೆ ನನ್ನೊಂದಿಗೆ ಶಿಕ್ಷಕರು ಕೈಜೋಡಿಸಬೇಕು. ಎಲ್ಲರೂ ಶ್ರಮಿಸಿದರೆ ಸರ್ಕಾರಿ ಶಾಲೆಗಳ ಸಬಲೀಕರಣವಾಗುತ್ತದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.