ಧಾರವಾಡದಲ್ಲಿ ನಡೆದ ಸರ್ಕಾರಿ ಶಾಲಾ ಮಕ್ಕಳ ಅಪಹರಣ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಕುರಿತು ತನಿಖೆ ಮಾಡಿ ವರದಿ ನೀಡಲು ಜಿಲ್ಲಾ ಪಂಚಾಯತಿ ಸಿಇಓ ಅವರು ಅಧಿಕಾರಿಗಳ ಸಮಿತಿ ರಚಿಸಿದ್ದಾರೆ.
ಜಿಲ್ಲಾಧಿಕಾರಿ ದಿವ್ಯ ಪ್ರಭು ಇಂದು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಅಪಹರಣದಿಂದ ಸುರಕ್ಷಿತವಾಗಿ ಪಾರಾಗಿ, ಜಿಲ್ಲಾ ಆಸ್ಪತ್ರೆಯ ಸಖಿ ವಾರ್ಡದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಿ, ಸಾಂತ್ವನ ಹೇಳಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, “ಜನವರಿ 12 ರಂದು ಜರುಗಿದ ಕಮಲಾಪುರ ಸರಕಾರಿ ಪ್ರಾಥಮಿಕ ಶಾಲೆಯ ಅಪರಣ ಪ್ರಕರಣದ ಆರೋಪಿ ವಿರುದ್ಧ ಎಪ್‍ಐಆರ್ ದಾಖಲಿಸಿ, ಪೊಲೀಸ್ ಕ್ರಮ ಜರುಗಿಸಲಾಗಿದೆ. ಶಾಲಾ ಅವಧಿಯಲ್ಲಿ ಮಕ್ಕಳ ಅಪಹರಣ ಆಗಿರುವುದರಿಂದ ಈ ಕುರಿತು ತನಿಖೆ ಮಾಡಿ ವರದಿ ನೀಡಲು, ಸಮಿತಿ ರಚಿಸಲಾಗಿದೆ. ಸಮಿತಿ ನೀಡುವ ವರದಿ ಪರಿಶೀಲಿಸಿ, ಲೋಪ ಉಂಟಾಗಿದ್ದಲ್ಲಿ ಸಂಬಂಧಿಸಿದವರ ಮೇಲೆ ನಿಯಮಾನುಸಾರ ಕ್ರಮ ಜರುಗಿಸಲಾಗುತ್ತದೆ” ಎಂದರು.
“ಶಾಲೆಯ ಊಟದ ವಿರಾಮದ ನಂತರ ಈ ಘಟನೆ ನಡೆದಿದೆ. ಶಿಕ್ಷಕರಿಗೆ ಹಾಗೂ ಶಾಲಾ ಸುಧಾರಣಾ ಸಮಿತಿ ಸದಸ್ಯರಿಗೆ ಮತ್ತು ಪೋಷಕರಿಗೆ ಮಕ್ಕಳ ಸುರಕ್ಷತೆ ಪರಿಕಲ್ಪನೆಗಳ ಬಗ್ಗೆ ಈಗಾಗಲೇ ತಿಳಿಸಿದ್ದೇವೆ ಹಾಗೂ ಮುಂದಿನ ದಿನಗಳಲ್ಲಿ, ಈ ರೀತಿಯ ಘಟನೆಗಳನ್ನು ತಡೆಯಲು ಶಾಲಾ ಸುರಕ್ಷತಾ ವ್ಯವಸ್ಥೆಯನ್ನು ಉತ್ತಮಗೊಳಿಸಲು ನಿರ್ದೇಶನವನ್ನು ನೀಡಿದ್ದೇವೆ” ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
“ಶಾಲಾ ಆವರಣದಲ್ಲಿ ಸುರಕ್ಷತೆ ಹೆಚ್ಚಿಸುವುದು, ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸೂಕ್ತ ನಿಯಮಗಳನ್ನು ಜಾರಿ ಮಾಡುವುದು ಸೇರಿದಂತೆ ವಿವಿಧ ರೀತಿಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರದ ನಿಯಮಾಳಿಗಳನ್ನು ಪರಿಶೀಲಿಸಿ, ಸೂಕ್ತ ಕ್ರಿಯಾಯೋಜನೆಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲು ಜಿಲ್ಲಾ ಪಂಚಾಯತಿ ಸಿಇಓ ಅವರಿಗೆ ನಿರ್ದೇಶನ ಕೊಡಲಾಗಿದೆ” ಎಂದು ಹೇಳಿದರು.
“ಪ್ರಕರಣದ ಆರೋಪಿಗೆ ಕಾನೂನು ಪ್ರಕಾರ ಕ್ರಮ ಆಗಬೇಕು. ಪ್ರಕರಣದ ಕುರಿತು ಸಮಗ್ರ ತನಿಖೆ ಮಾಡಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬೇಕು. ಜಿಲ್ಲಾಡಳಿತವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸದರಿ ಪ್ರಕರಣದಲ್ಲಿ ವಿಶೇಷ ಅಭಿಯೋಜಕರ ಅವಶ್ಯಕತೆ ಇದ್ದಲ್ಲಿ ಪೊಲೀಸ್ ಇಲಾಖೆ ಪರಿಶೀಲಿಸಿ, ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು. ಪ್ರಕರಣದ ಆರೋಪಿಯು ಈ ಹಿಂದೆಯೂ ಇಂತಹ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸ್ ಮಾಹಿತಿ ಇದ್ದು, ಈ ಹಿನ್ನಲೆಯಲ್ಲಿ ಸಮಗ್ರ ತನಿಖೆ ಮಾಡಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು” ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ಪಂಚಾಯತಿ ಸಿಇಒ ಭುವನೇಶ ಪಾಟೀಲ ಮಾತನಾಡಿ, “ಪ್ರಕರಣದ ತನಿಖೆಗೆ ಕ್ರಮ ಕೈಗೊಳ್ಳಲಾಗಿದೆ. ವರದಿ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ. ಶಾಲಾ ಅವಧಿಯಲ್ಲಿ ಕಡ್ಡಾಯವಾಗಿ, ಶಿಕ್ಷಕರು ಶಾಲೆಯಲ್ಲಿ ಇದ್ದು, ಮಕ್ಕಳಿಗೆ ಪಾಠ ಬೋಧನೆ ಮಾಡಬೇಕು ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ನಿಗಾವಹಿಸಬೇಕು. ಈ ಕುರಿತು ಪರಿಶೀಲಿಸಿ, ಕ್ರಮವಹಿಸಲು ಈಗಾಗಲೇ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ” ಎಂದರು.
“ಎಲ್ಲಾ ಸರಕಾರಿ ಶಾಲೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಜಿಲ್ಲಾ ಪಂಚಾಯತಿ ವತಿಯಿಂದ ಸುತ್ತೋಲೆ ನೀಡಲಾಗುತ್ತದೆ. ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಸುಧಾರಣೆ ಮತ್ತು ಕಾಂಪೌಂಡ್ ನಿರ್ಮಾಣದ ಬಗ್ಗೆ ಸ್ಥಳ ಪರಿಶೀಲಿಸಿ, ನಿರ್ಮಿಸಲಾಗುತ್ತದೆ” ಎಂದು ತಿಳಿಸಿದರು.

