ಬೆಂಗಳೂರು: ಎಂಬಿಬಿಎಸ್ ಪದವೀಧರರನ್ನು ಕಡ್ಡಾಯ ಗ್ರಾಮೀಣ ಸೇವೆಯಡಿ ಗ್ರಾಮೀಣ ಹುದ್ದೆಗಳಿಗೆ ಭರ್ತಿ ಮಾಡಿದ ನಂತರ ನಗರ ಪ್ರದೇಶಗಳಲ್ಲಿನ ಹುದ್ದೆಗಳಿಗೆ ನೇಮಕ ಮಾಡಲು ಅವಕಾಶ ಕಲ್ಪಿಸುವ ಕರ್ನಾಟಕ ವೈದ್ಯಕೀಯ ಕೋರ್ಸ್ ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತಿದ್ದುಪಡಿ ವಿಧೇಯಕ ಸೇರಿದಂತೆ ಮೂರು ವಿಧೇಯಕಗಳಿಗೆ ರಾಜ್ಯ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಕರ್ನಾಟಕ ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತಿದ್ದುಪಡಿ ವಿಧೇಯಕ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿ) ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕ. ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ(ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ವಿಧೇಯಕಗಳ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ.
ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತಿದ್ದುಪಡಿ ವಿಧೇಯಕ ಅನ್ವಯ ನಗರದಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದವರು ಕಡ್ಡಾಯವಾಗಿ ಒಂದು ವರ್ಷ ಗ್ರಾಮೀಣ ಸೇವೆ ಸಲ್ಲಿಸಲು ಈ ಹಿಂದೆ ಕಾಯ್ದೆ ಮಾಡಲಾಗಿತ್ತು. ಸೇವೆಗೆ ಬರುವವರಿಗೆ ಅಗತ್ಯವಿರುವಷ್ಟು ಹುದ್ದೆ ಸೃಜಿಸಿ ಭತ್ಯೆ ನೀಡಲು ಸಾಧ್ಯವಾಗದ ಹಿನ್ನೆಲೆ ತಿದ್ದುಪಡಿ ಮಾಡಲಾಗಿದೆ.