ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಫೆಬ್ರವರಿ ಅಥವಾ ಮಾರ್ಚ್ ನಲ್ಲಿ ನಡೆಯಲಿದ್ದು, ಚುನಾವಣೆಗೆ ಸಿದ್ಧತೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಡಿನ್ನರ್ ಪಾರ್ಟಿಯಲ್ಲಿ ಸಚಿವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಔತಣಕೂಟ ಏರ್ಪಡಿಸಿದ್ದ ಸಿಎಂ, ಮುಂದಿನ ಚುನಾವಣೆಗಳನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಸಚಿವರಿಗೆ ನಿರ್ದೇಶನ ನೀಡಿದ್ದಾರೆ. ಹಲವು ವರ್ಷಗಳಿಂದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆದಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಹಿನ್ನೆಲೆಯಲ್ಲಿ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳಿಗೂ ಚುನಾವಣೆ ವಿಳಂಬವಾಗಿದೆ. ಈ ಚುನಾವಣೆಗಳಲ್ಲಿ ಗೆಲ್ಲಬೇಕಾದ ಸವಾಲು ನಮ್ಮ ಮುಂದಿದ್ದು, ಈಗಿನಿಂದಲೇ ಸಿದ್ಧತೆ ನಡೆಸಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಸರ್ಕಾರದ ನಿಲುವುಗಳನ್ನು ಸಮರ್ಥಿಸಿಕೊಳ್ಳಿ. ಶ್ರದ್ಧೆಯಿಂದ ಇವೆಲ್ಲವನ್ನೂ ಮಾಡಿದರೆ ಚುನಾವಣೆ ಗೆಲ್ಲುವುದು ಕಷ್ಟವೇನಲ್ಲ ಎಂದು ಸಿಎಂ ತಿಳಿಸಿದ್ದಾರೆ.