ಬೆಂಗಳೂರು(ವಿಧಾನ ಪರಿಷತ್) : ಜಿಎಸ್ಟಿ ಮತ್ತು ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎನ್ನುವ ಕಾರಣಕ್ಕೆ ಸುಮಾರು 52,000 ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುತ್ತಿಲ್ಲ. ಇವರಲ್ಲಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆ ಇತ್ಯರ್ಥಪಡಿಸಲಾಗಿದೆ. ಉಳಿದ ಫಲಾನುಭವಿಗಳ ಸಮಸ್ಯೆ ಸರಿಪಡಿಸಲು ಕ್ರಮ ವಹಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಪಿ.ಹೆಚ್. ಪೂಜಾರ ಅವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ರಾಜ್ಯದಲ್ಲಿ ಸುಮಾರು 1.26 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ. ಕೆಲವು ಫಲಾನುಭವಿಗಳು ಕೆಲವು ವ್ಯವಹಾರ ನಡೆಸುವಾಗ ಜಿಎಸ್ಟಿ ಆದಾಯ ತೆರಿಗೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ. ಗೃಹಲಕ್ಷ್ಮಿ ಯೋಜನೆ ಸಂಬಂಧ ರೂಪಿಸಿದ ಸಾಫ್ಟ್ವೇರ್ ನಲ್ಲಿ ಜಿಎಸ್ಟಿ, ಆದಾಯ ತೆರಿಗೆ ಎಂದು ತೋರಿಸಿದಲ್ಲಿ ಬದಲಾವಣೆ ಮಾಡಲು ಆಗುವುದಿಲ್ಲ. ಇದರಲ್ಲಿ ಸರ್ಕಾರ ಅಥವಾ ಇಲಾಖೆಯ ಯಾವುದೇ ತಪ್ಪಿಲ್ಲ. ಗೃಹಲಕ್ಷ್ಮಿ ಯೋಜನೆ ನಿರಂತರ ಪ್ರಕ್ರಿಯೆಯಾಗಿದ್ದು, ಈಗಲೂ ಅರ್ಜಿ ಸಲ್ಲಿಸಿದವರಿಗೆ ಹಣ ನೀಡಲಾಗುವುದು ಎಂದು ತಿಳಿಸಿದ್ದಾರೆ.

