ಬೆಂಗಳೂರು: ಅಭಿವೃದ್ಧಿ ಯೋಜನೆಗಳಿಗಾಗಿ ಭೂಮಿ ನೀಡಿದ ರೈತರಿಗೆ ವಿತರಿಸುವ ಪರಿಹಾರದ ಹಣಕ್ಕೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ವಿಧಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಬೆಂಗಳೂರು ಮೆಟ್ರೋ ರೈಲು ಯೋಜನೆಗೆ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ತಮ್ಮಿಂದ ವಶಪಡಿಸಿಕೊಂಡ ಜಮೀನಿಗೆ ವಿತರಿಸಿದ ಪರಿಹಾರಕ್ಕೆ ಜಿ.ಎಸ್.ಟಿ. ಪಾವತಿಸುವಂತೆ ಸೂಚಿಸಿ ವಾಣಿಜ್ಯ ತೆರಿಗೆ ಇಲಾಖೆ ನೀಡಿದ್ದ ಶೋಕಾಸ್ ನೋಟಿಸ್ ಪ್ರಶ್ನಿಸಿ ಆಶಾ ಮತ್ತಿತರರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಗಳನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ನ್ಯಾಯಪೀಠ, ಅರ್ಜಿದಾರ ರೈತರಿಗೆ ಇಷ್ಟವಿಲ್ಲದಿದ್ದರೂ ಅವರ ಭೂಮಿಯನ್ನು ಸರ್ಕಾರ ಸ್ವಾಧೀನಪಡಿಸಿಕೊಂಡಿದೆ. ಭೂಮಿ ಕಳೆದುಕೊಂಡಿರುವ ಮತ್ತು ಭೂಮಿಯೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರುವ ರೈತರಿಗೆ ಪರ್ಯಾಯವಾಗಿ ನಷ್ಟ ಪರಿಹಾರ ನೀಡಲಾಗುತ್ತದೆ. ಈ ಒಪ್ಪಂದ ಪ್ರಕ್ರಿಯೆಯಲ್ಲಿ ಹಲವು ಷರತ್ತು ಒಳಗೊಂಡಿರಬಹುದು. ಅದಕ್ಕೂ ಅರ್ಜಿದಾರರಿಗೆ ನೀಡುವ ಪರಿಹಾರದ ಮೊತ್ತಕ್ಕೂ ಸಂಬಂಧವಿಲ್ಲ ಎಂದು ಹೈಕೋರ್ಟ್ ಹೇಳಿದೆ.