ಬೆಂಗಳೂರು: ಸಣ್ಣಪುಟ್ಟ ವ್ಯಾಪಾರಿಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ತೆರಿಗೆ ನೋಟಿಸ್ ನೀಡಿದೆ. ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿ.ಎಸ್.ಟಿ. ನೋಟಿಸ್ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಜಿ.ಎಸ್.ಟಿ. ಯಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ ಸಿ.ಜಿ.ಎಸ್.ಟಿ. ಮತ್ತು ರಾಜ್ಯ ಸರ್ಕಾರಗಳ ಅಡಿಯಲ್ಲಿ ಎಸ್.ಜಿ.ಎಸ್.ಟಿ. ಎಂಬ ಎರಡು ಭಾಗಗಳಿವೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ತಿಳಿಸಿದ್ದಾರೆ.
ಜಿ.ಎಸ್.ಟಿ. ಕೌನ್ಸಿಲ್ ನಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲು ಮಹತ್ವದ ಪಾತ್ರ ವಹಿಸಿರುವುದು ರಾಜ್ಯ ಸರ್ಕಾರಗಳು. ಕೇಂದ್ರ ಸರ್ಕಾರಕ್ಕೆ ಕೇವಲ ಮೂರನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಉಳಿದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿದೆ. ಮೂರನೇ ಎರಡು ಭಾಗದಷ್ಟು ಅಧಿಕಾರ ಹೊಂದಿರುವ ರಾಜ್ಯ ಸರ್ಕಾರಗಳ ನಿರ್ಣಯವೇ ಅಂತಿಮವಾಗುತ್ತದೆ. ಬೇರೆ ಯಾವುದೇ ರಾಜ್ಯಗಳಲ್ಲಿ ಈ ರೀತಿ ನೋಟಿಸ್ ನೀಡಿಲ್ಲ. ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿ ಈಗ ಕೇಂದ್ರದತ್ತ ಬೊಟ್ಟು ಮಾಡಿದೆ ಎಂದು ದೂರಿದ್ದಾರೆ.