ಬೆಂಗಳೂರು: ರಾಜ್ಯಸಭೆಗೆ ಮತ್ತೊಮ್ಮೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಯ್ಕೆ ಮಾಅಡಲಾಗುವುದು ಎಂಬ ಮಾತು ಕೇಳಿಬಂದಿತ್ತು. ಎನ್ ಡಿಎ ಅಭ್ಯರ್ಥಿಯಾಗಿ ದೇವೇಗೌಡರಿಗೆ ಟಿಕೆಟ್ ನೀಡುವ ನಿರೀಕ್ಷೆ ಇತ್ತು. ಆದರೆ ಕೊನೇ ಕ್ಷಣದಲ್ಲಿ ಹೆಚ್.ಡಿ.ದೇವೇಗೌಡರಿಗೆ ಎನ್ ಡಿಎ ರಾಜ್ಯಸಭೆ ಟಿಕೆಟ್ ಕೈತಪ್ಪಿದೆ. ಬಿಜೆಪಿ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್ಡಿಎ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಈ ಪಟ್ಟಿಗೆ ಅನುಮೋದನೆ ನೀಡಿದ್ದು, ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಒಬಿಸಿ ನಾಯಕ ಪ್ರೊ. ಎಂ. ನಾಗರಾಜ ಅವರಿಗೆ ಟಿಕೆಟ್ ನೀಡಿದೆ. ಇನ್ನು ವಿಧಾನ ಪರಿಷತ್ ಚುನಾವಣೆಗೆ ಪಕ್ಷದ ನಿಷ್ಠಾವಂತ ನಾಯಕರಾದ ಲಿಂಗರಾಜ್ ಪಾಟೀಲ್ ಮತ್ತು ರಘು ಕೌಟಿಲ್ಯ ಅವರನ್ನು ಕಣಕ್ಕಿಳಿಸಲಾಗಿದೆ. ಬಿಜೆಪಿಯ ಈ ನಿರ್ಧಾರ ಮೈತ್ರಿ ಪಕ್ಷವಾದ ಜೆಡಿಎಸ್‌ಗೆ ಭಾರಿ ಆಘಾತ ನೀಡಿದೆ. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಮರುಆಯ್ಕೆಯ ಲೆಕ್ಕಾಚಾರದಲ್ಲಿದ್ದ ಜೆಡಿಎಸ್ ಶಾಕ್ ಆಗಿದೆ.
ರಾಜ್ಯಸಭಾ ಟಿಕೆಟ್ ಆಕಾಂಕ್ಷೆಯಲ್ಲಿದ್ದ ಪ್ರಾದೇಶಿಕ ಪಕ್ಷ ಜೆಡಿಎಸ್‌ಗೆ ಮುಖಭಂಗವಾಗಿದೆ. ಸದ್ಯ ರಾಜ್ಯಸಭಾ ಸದಸ್ಯರಾಗಿರುವ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಅವಧಿ ಮುಕ್ತಾಯಗೊಳ್ಳುತ್ತಿದ್ದು, ಹಿರಿತನದ ಆಧಾರದ ಮೇಲೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಗೌಡರನ್ನೇ ಜಂಟಿ ಅಭ್ಯರ್ಥಿಯನ್ನಾಗಿ ಮರುಆಯ್ಕೆ ಮಾಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಬಿಜೆಪಿ ಹೈಕಮಾಂಡ್ ವಯಸ್ಸು ಮತ್ತು ಆರೋಗ್ಯದ ಕಾರಣವನ್ನು ಮುಂದಿಟ್ಟುಕೊಂಡು ದೇವೇಗೌಡರಿಗೆ ಟಿಕೆಟ್ ನಿರಾಕರಿಸಿದೆ.
ಮೈತ್ರಿಕೂಟದಲ್ಲಿದ್ದರೂ ‘ನಾವು ಯಾವುದೇ ಕಾರಣಕ್ಕೂ ಟಿಕೆಟ್‌ಗಾಗಿ ಬಿಜೆಪಿ ನಾಯಕರಿಗೆ ಒತ್ತಡ ಹಾಕುವುದಿಲ್ಲ’ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಪದೇ ಪದೇ ಹೇಳುತ್ತಿದ್ದರು. ಇದೀಗ ಬಿಜೆಪಿ ಹೊಸಬರನ್ನು ಕಣಕ್ಕಿಳಿಸಿರುವುದು ಕುತೂಹಲ ಮೂಡಿಸಿದೆ.
ಇನ್ನು ವಿಧಾನ ಪರಿಷತ್ ಚುನಾವಣೆಗೆ ಆಯ್ಕೆಯಾಗಿರುವ ಲಿಂಗರಾಜ್ ಪಾಟೀಲ್ ಈ ಹಿಂದೆ ಬಿಜೆಪಿ ಶಿಸ್ತು ಸಮಿತಿಯ ಮಾಜಿ ರಾಜ್ಯಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮತ್ತೊಬ್ಬ ಅಭ್ಯರ್ಥಿ ರಘು ಕೌಟಿಲ್ಯ ಪ್ರಸ್ತುತ ಬಿಜೆಪಿ ಒಬಿಸಿ ಮೋರ್ಛಾದ ರಾಜ್ಯಾಧ್ಯಕ್ಷರಾಗಿ ಹಿಂದುಳಿದ ವರ್ಗಗಳನ್ನು ಪಕ್ಷದತ್ತ ಸೆಳೆಯುವಲ್ಲಿ ಸಕ್ರಿಯರಾಗಿದ್ದಾರೆ. ಸಂಘಟನಾ ಶಕ್ತಿ ಮತ್ತು ನಿಷ್ಠೆಯನ್ನು ಪರಿಗಣಿಸಿ ಹೈಕಮಾಂಡ್ ಇವರಿಬ್ಬರಿಗೆ ಮೇಲ್ಮನೆ ಟಿಕೆಟ್ ನೀಡಿದೆ.
ಒಟ್ಟು 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಮತದಾನ ನಡೆಯಲಿದೆ.

