ನವದೆಹಲಿ: ರಾಜ್ಯದ ನೀರಾವರಿ ಸಮಸ್ಯೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಜ್ಯ ಸಭೆಯಲ್ಲಿ ಗಮನಸೆಳೆದರು. ಕರ್ನಾಟಕ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ಗದ್ಗದಿತರಾಗಿ ಮಾತಾನಾಡಿದ ದೇವೇಗೌಡರು, ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರಕಾರವನ್ನು ಮನವಿ ಮಾಡಿದರು.
ರಾಜ್ಯಸಭೆಯಲ್ಲಿ ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಹೆಚ್.ಡಿ.ದೇವೇಗೌಡರು, ಕರ್ನಾಟಕದ ಅನೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಕರ್ನಾಟಕ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದರು.
ನನ್ನ ರಾಜ್ಯಸಭಾ ಅವಧಿ ಇನ್ನೊಂದು ತಿಂಗಳಲ್ಲಿ ಮುಗಿಯಲಿದೆ. ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರ ಹಿತಕಾಯಿರಿ. ನಾವೆಲ್ಲರೂ ಮನುಷ್ಯರು, ಮಳೆ ಬಿದ್ದರೆ ನೀರು, ಇಲ್ಲವಾದರೆ ಇಲ್ಲ. ಈ ಸದನದ ಎಲ್ಲಾ ಸದಸ್ಯರು ಕರ್ನಾಟಕದ ರಕ್ಷಣೆ ಮಾಡಬೇಕು ಎಂಬುದಾಗಿ ನಾನು ಕೈ ಮುಗಿದು ಬೇಡುತ್ತೇನೆ ಎಂದು ಮನವಿ ಮಾಡಿದರು.
ಕರ್ನಾಟಕ ನಿರಂತರವಾಗಿ ನೆರೆ ರಾಜ್ಯಗಳ ಜತೆ ನೀರಾವರಿ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ. ನಾನು ಕೂಡ ನೀರಿಗಾಗಿ 65 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇನೆ. ಈ ಸದನದಲ್ಲಿ ನಾನು ನ್ಯಾಯಮಂಡಳಿಗಳು ನೀಡಿರುವ ತೀರ್ಪುಗಳ ಬಗ್ಗೆ ಚರ್ಚಿಸಲು ಬಯಸುವುದಿಲ್ಲ ಎಂದ ಅವರು, ಕರ್ನಾಟಕ ರಾಜ್ಯಕ್ಕೆ ನೀರಿನದೇ ಬಹುದೊಡ್ಡ ಬಿಕ್ಕಟ್ಟಾಗಿದೆ. ಒಂದೆಡೆ ತಮಿಳುನಾಡು, ಮತ್ತೊಂದೆಡೆಯಲ್ಲಿ ಆಂಧ್ರ ಪ್ರದೇಶ, ಇನ್ನೊಂದು ಕಡೆಯಲ್ಲಿ ಗೋವಾದಿಂದ ತೊಂದರೆ ಎದುರಿಸುತ್ತಿದೆ. ನಾನು ಜೀವನದ ಕೊನೆಕಾಲದಲ್ಲಿ ಇದ್ದೇನೆ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ಮನವಿ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಈ ಬಿಕ್ಕಟ್ಟಿಗೆ ಪರಿಹಾರ ನೀಡಬೇಕು. ನಾನು ನಿಮ್ಮ (ಎನ್‌ಡಿಎ) ಜತೆಯಲ್ಲಿಯೇ ಇರುತ್ತೇನೆ. ನನ್ನ ಮಗ ನಿಮ್ಮ ಸಂಪುಟದಲ್ಲಿ ಇದ್ದಾನೆ. ನಾವು ಮುಂದೆಯೂ ನಿಮ್ಮ ಜತೆಗೇ ಇರುತ್ತೇವೆ ಹಾಗೂ ಮೈತ್ರಿಕೂಟ ಬದಲಾವಣೆ ಮಾಡುವ ಯಾವ ಪ್ರಶ್ನೆಯೇ ಇಲ್ಲ. ರಾಜ್ಯದ ಜನರಿಗೆ ನ್ಯಾಯ ಒದಗಿಸಿ ಎಂಬುದಷ್ಟೇ ನನ್ನ ಮನವಿ ಎಂದರು.
ಇದೇ ವೇಳೆ ಯುರೋಪಿಯನ್ ಒಕ್ಕೂಟ ಹಾಗೂ ಅಮೆರಿಕ ಜತೆ ಯಶಸ್ವಿಯಾಗಿ ವ್ಯಾಪಾರ ಒಪ್ಪಂದ ಮಾಡಿಕೊಂಡ ಭಾರತದ ರಾಜತಾಂತ್ರಿಕ ಜಾಣ್ಮೆಯನ್ನು ಕೊಂಡಾಡಿದ ಮಾಜಿ ಪ್ರಧಾನಿಗಳು, ಇದಕ್ಕೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಈ ಬಗ್ಗೆ ನಾನು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂಬ ಅಂಶವನ್ನು ಅವರು ಉಲ್ಲೇಖಿಸಿದರು.
ಪ್ರಧಾನಿ ಮೋದಿ ಅವರನ್ನು ವಿನಾಕಾರಣ ಟೀಕೆ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಆಗಿದ್ದು, ಜನರ ಆದಾಯ ಹೆಚ್ಚಳ ಆಗುತ್ತಿದೆ ಹಾಗೂ ರೈತಪರವಾಗಿ ಈ ಸರ್ಕಾರ ಕೆಲಸ ಮಾಡುತ್ತಿದೆ. 2047ಕ್ಕೆ ಭಾರತವು ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲವೆಂದು ಹೇಳಿದರು.

