ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇನ್ನೊಂದೆಡೆ ಮದ್ದೂರಿನಲ್ಲಿ ಕಲ್ಲು ತೂರಾಟ ಘಟನೆ ಖಂಡಿಸಿ ವಿವಿಧ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಲ್ಲುತೂರಾಟ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಕರೆ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ. ಒತ್ತಡಕ್ಕೆ ಮಣಿದರೆ ಖುದ್ದು ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದಿದೆ. ಕಳೆದ ವರ್ಷ ನೆಲಮಂಗಲದಲ್ಲಿಯೂ ಘಟನೆ ನಡೆದಿತ್ತು. ಇದೀಗ ಮಂಡ್ಯದಲ್ಲಿ ಮತ್ತೆ ಅಂತಹ ವಾತಾವರಣ ನಿರ್ಮಾಣವಾಗಿದೆ. ಕುವೆಂಪುವರ ಶಾಂತಿಯ ತೋಟಕ್ಕೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಕಾಂಗ್ರೆಸ್ ನಡವಳಿಕೆ, ಅವರ ಆಡಳಿತವೇ ಈ ಘಟನೆಗಳಿಗೆ ಕಾರಣ. ಹಿಂದೂಗಳು ಅಸಮಾಧಾನವಾಗುವಂತೆ ಕಾಂಗ್ರೆಸ್ ಮಾಡುತ್ತಿದೆ. ನಾನು ರಾಜಕೀಯ ಮಾಡುತ್ತಿಲ್ಲ. ರಾಜ್ಯದ ಹಲವೆಡೆ ಗಲಾಟೆಗಳು ಆಗಲು ಕಾಂಗ್ರೆಸ್ ಪಕ್ಷ ಕಾರಣ ಎಂದು ಕಿಡಿಕಾರಿದ್ದಾರೆ.