ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್; ಸ್ವಾಮೀಜಿ ವಶಕ್ಕೆ: ಸರ್ಕಾರದ ಕ್ರಮ ಹಿಟ್ಲರ್ ಮಾರ್ಗ; HDK ಆಕ್ರೋಶ

ಬೆಂಗಳೂರು: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಕ್ರಮ ಹಾಗೂ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸೇರಿ ಹಲವರನ್ನು ವಶಕ್ಕೆ ಪಡೆದಿರುವ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಪಂಚಮಸಾಲಿ ಸಮುದಾಯದವರ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರಕಾರ ಅಡಾಲ್ಫ್ ಹಿಟ್ಲರ್ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸಂತರು, ಪಂಚಮಸಾಲಿ ಸಮುದಾಯ ಜಗದ್ಗುರುಗಳಾದ ಶ್ರೀ ಬಸವ ಮೃತ್ಯುಂಜಯ ಮಹಾಸ್ವಾಮೀಜಿಗಳನ್ನು ಅತ್ಯಂತ ಹೇಯವಾಗಿ ನಡೆಸಿಕೊಂಡಿರುವುದು ಅತೀವ ನೋವುಂಟು ಮಾಡಿದೆ. ಇದು ಶಿಲಾಯುಗ ಕಾಲದ ಮನಃಸ್ಥಿತಿಯ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಬೇಡಿಕೆಗಳ ಬಗ್ಗೆ ಸ್ವಾಮೀಜಿ ಅವರು, ಸಮುದಾಯದ ಪ್ರಮುಖರು ನಿರಂತರವಾಗಿ ಸರಕಾರಕ್ಕೆ ಮನವಿ ಮಾಡುತ್ತಲೇ ಇದ್ದರು. ಆದರೂ ಸರಕಾರ ಕಿವುಡಾಗಿತ್ತು, ನಿರ್ಲಕ್ಷ್ಯ ವಹಿಸಿತ್ತು. ಶಾಂತಿಯುತವಾಗಿ ಪ್ರತಿಭಟಿಸಲು ಬಂದ ಸ್ವಾಮೀಜಿಗಳು, ಸಮುದಾಯದ ನಾಯಕರು, ಜನತೆಯ ಮೇಲೆ ದಬ್ಬಾಳಿಕೆ ನಡೆಸಿ ಪೊಲೀಸ್ ವಶಕ್ಕೆ ತೆಗೆದುಕೊಂಡ ಕ್ರಮ ಖಂಡನೀಯ ಎಂದು ಗುಡುಗಿದ್ದಾರೆ.

ಸರಕಾರವೇ ಶಾಂತಿ ಕದಡುವ ಯತ್ನ ಮಾಡಿದರೆ ಅದಕ್ಕೆ ಸರಕಾರವೇ ಪೂರ್ಣ ಹೊಣೆ. ಕೂಡಲೇ ಸ್ವಾಮೀಜಿಯವರ ಹಾಗೂ ಸಮುದಾಯದ ಕ್ಷಮೆ ಕೇಳಬೇಕು ಹಾಗೂ ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ತುರ್ತು ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read