ಬೆಂಗಳೂರು: ರಾಜ್ಯ ಸರ್ಕಾರ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುವ ಮೂಲಕ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಮುಂದೆ ಇದು ದೊಡ್ಡ ಸಮಸ್ಯೆಗೆ ಕಾರಣವಾಗಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಕುಮಾರಸ್ವಾಮಿ, ರಾಜ್ಯ ಸರ್ಕಾರ ಆತುರದಲ್ಲಿ ಜಾತಿಗಣತಿ ಮಾಡಲು ಹೊರಟಿದೆ. ಸರ್ಕಾರ ಬೆಂಕಿ ಹಚ್ಚಲು ಏನು ಮಾಡಬೇಕೋ ಅದನ್ನು ಮಾಡುತ್ತಿದೆ. ಇದರ ಪ್ರತಿಫಲ ಮುಂದೆ ಗೊತ್ತಾಗಲಿದೆ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಎಲ್ಲಾ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಸ್ವಾಮೀಜಿಗಳ ನೇತೃತ್ವದಲ್ಲಿ ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಿದ್ದೇವೆ. ಇದು ಕಾಂತರಾಜು ವರದಿಗಿಂತಲೂ ಕೆಟ್ಟದಾಗಿ ಇರಲಿದೆ. ೧೫ ದಿನಗಳಲ್ಲಿ ಸಮೀಕ್ಷೆ ನಡೆಸುವಂತೆ ಸರ್ಕಾರ ಹೇಳಿದೆ. ಒಂಭತ್ತು ದಿನ ನವರಾತ್ರಿ ಇರುತ್ತದೆ. ಉಳಿದ ಆರು ದಿನಗಳಲ್ಲಿ ಆಯೋಗ ಏನು ಮಾಡಲು ಸಾಧ್ಯ? ಇವರು ಕಾಂತರಾಜು ವರದಿಯನ್ನೇ ಭಟ್ಟಿ ಇಳಿಸುತ್ತಾರಾ? ಸರ್ಕಾರ ಏನು ಮಾಡಲು ಹೊರಟಿದೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.