ಬೆಂಗಳೂರು: 17 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿಗೆ ಖ್ಯಾತ ಗೀತ ರಚನೆಕಾರ ಮತ್ತು ಸಂಗೀತ ನಿರ್ದೇಶಕ ಹಂಸಲೇಖ ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲೂ ಲುಲು ಮಾಲ್ ನಲ್ಲಿ ಶುಕ್ರವಾರ ನಡೆಯುವ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಹಂಸಲೇಖ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್ ವಿನೋದ್ ಚಂದ್ರ, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ಮುರಳಿ ಈ ಬಗ್ಗೆ ಗುರುವಾರ ಹಂಸಲೇಖ ಅವರನ್ನು ಭೇಟಿಯಾಗಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ, ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

