ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಡೆದ ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡೇಟಿಗೆ ಮೂವರು ಬಲಿ ಪ್ರಕರಣ ಬೆನ್ನಲ್ಲೇ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕರ್ತವ್ಯ ಸ್ಥಳದಿಂದ ನಾಪತ್ತೆಯಾಗಿದ್ದಾರೆ ಎಂದು ಹನೂರು ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿರುವ ಸ್ಥಳೀಯರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 15 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರದ ವತಿಯಿಂದ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆಯಾಗಿದ್ದು, ವೈಯಕ್ತಿಕವಾಗಿ ನಾನು ತಲಾ 10 ಲಕ್ಷ ರೂ. ನೆರವು ನೀಡಲಿದ್ದೇನೆ. ಈ ಮೂಲಕ ಮೃತರ ಕುಟುಂಬಕ್ಕೆ ತಲಾ 15 ಲಕ್ಷ ರೂ. ಪರಿಹಾರ ತಲುಪುವ ಸಂಪೂರ್ಣ ಜವಾಬ್ದಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು.
ಗುಂಡು ಹಾರಿಸಿದ ಅರಣ್ಯ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆತರುವಂತೆ ಪ್ರತಿಭಟನಾಕಾರರು ಪಟ್ಟುಹಿಡಿದಿರುವ ಕುರಿತು ಪ್ರತಿಕ್ರಿಯಿಸಿದ ಶಾಸಕರು, ಈಗಲೇ ಅವರನ್ನು ಇಲ್ಲಿಗೆ ಕರೆತರಲು ಸಾಧ್ಯವಿಲ್ಲ. ಅವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ಘಟನೆಗೆ ಕಾರಣರಾದ ಸಿಬ್ಬಂದಿಯನ್ನು ತಕ್ಷಣವೇ ಅಮಾನತುಗೊಳಿಸಿ, ಕಾನೂನು ಪ್ರಕಾರ ಸಮಗ್ರ ತನಿಖೆ ಮುಂದುವರಿಸಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಮತ್ತು ಪ್ರತಿಭಟನೆಯನ್ನು ಕೈಬಿಡುವಂತೆ ಸ್ಥಳೀಯರ ಮನವೊಲಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದರು.

