ಹಾಸನ: ಮಾದಕ ವಸ್ತುಗಳ ವಿರುದ್ಧ ಸಮರ ಸಾರಿರುವ ಪೊಲೀಸರು ಹಾಸನದಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಭೇದಿಸಿದ್ದಾರೆ. ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಹಾಸನ ನಗರದಲ್ಲಿ ಎಂಡಿಎಂಎ ಮಾದಕ ವಸ್ತುಗಳ ಮಾರಾಟ ಹೆಚ್ಚುತ್ತಿದ್ದು, ಚೆಕ್‌ಪೋಸ್ಟ್ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ ಸುಮಾರು 40 ಗ್ರಾಂ ಎಂಡಿಎಂಎ ಪತ್ತೆಯಾಗಿದ್ದು, ಅದರ ಮೌಲ್ಯ ರೂ.2 ಲಕ್ಷಕ್ಕೂ ಅಧಿಕವೆಂದು ಅಂದಾಜಿಸಲಾಗಿದೆ.
ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಹಾಸನದ ರಾಜ್‌ಕುಮಾರ್ ನಗರ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಸಂಚರಿಸುತ್ತಿದ್ದ ಎರ್ಟಿಗಾ ಕಾರನ್ನು ತಪಾಸಣೆ ನಡೆಸಿದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಬಂಧಿತರನ್ನು ಶಿವಮೊಗ್ಗ ಮೂಲದ ಫರ್ವೀಜ್ (29), ಸುಹೇಲ್ (24), ಅಬ್ದುಲ್ ಯಾಸಿನ್ (20), ಇಬ್ರತ್ ಖಾನ್ (24) ಹಾಗೂ ಹಾಸನದ ಸೈಯದ್ ಯೂಸಫ್ (23) ಎಂದು ಗುರುತಿಸಲಾಗಿದೆ. ನಾಲ್ವರು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಒಬ್ಬ ಹಾಸನ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. 40 ಗ್ರಾಂ ಎಂಡಿಎಂಎ ಹಾಗೂ ಆರೋಪಿಗಳು ಬಳಸುತ್ತಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.

