ಹಾವೇರಿ: ಜನಪ್ರತಿನಿಧಿಗಳೇ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುವ ಮೂಲಕ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸುವ ಮೂಲಕ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಕಾಂಗ್ರೆಸ್ ಶಾಸಕ ಪ್ರಕಾಶ್ ಕೋಳಿವಾಡ ಅವರಿಗೆ ಟ್ರಾಫಿಕ್ ಪೊಲೀಸರು ದಂಡ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಶಾಸಕ ಪ್ರಕಾಶ್ ಕೋಳಿವಾಡ ಅವರು, ಆಗಸ್ಟ್ 25ರಂದು ಹೆಲ್ಮೆಟ್ ಧರಿಸದೇ ಬುಲೆಟ್ ಬೈಕ್ ಚಲಾಯಿಸಿದ್ದರು. ಈ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಶಾಸಕರೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಸಾರ್ವಜನಿಕರಿಂದಲೂ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಜನಸಾಮಾನ್ಯರು ಸಂಚಾರಿ ನಿಯಮ ಉಲಂಘಿಸಿದರೆ ದಂಡ ವಿಧಿಸುವ ಟ್ರಾಫಿಕ್ ಪೊಲೀಸರು ಜನಪ್ರತಿನಿಧಿಗಳಿಗೂ ಡಂಡ ವಿಧಿಸಬೇಕು. ಕಾನೂನು ಎಲ್ಲರಿಗೂ ಒಂದೇ ಎಂದು ಸಾರ್ವಜನಿಕರು ಆಗ್ರಹಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ರಾಣೇಬೆನ್ನೂರು ಟ್ರಾಫಿಕ್ ಪೊಲೀಸರು ಶಾಸಕ ಪ್ರಕಾಶ್ ಕೋಳಿವಾಡ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೇ 500 ರೂ. ದಂಡ ವಿಧಿಸಿದ್ದಾರೆ.
ಪೊಲೀಸರ ನೋಟಿಸ್ ಆಧರಿಸಿ ಶಾಸಕ ಪ್ರಕಾಶ್ ಕೋಳಿವಾಡ ಅವರು 500 ರೂಪಾಯಿ ದಂಡ ಪಾವತಿಸಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲೂ ಮಾಹಿತಿ ಹಂಚಿಕೊಂಡಿದ್ದಾರೆ. ಎಸ್‌ಪಿ ಮೇಡಂ ಅವರು ನನಗೆ ನೋಟಿಸ್ ನೀಡಿದ್ದಾರೆ. ಅವರು ತಮ್ಮ ಕರ್ತವ್ಯವನ್ನು ನಿರ್ವಹಿಸಿದ್ದಾರೆ. ಅದನ್ನು ನಾನು ಗೌರವಿಸುತ್ತೇನೆ ಎಂದು ಶಾಸಕ ಪ್ರಕಾಶ್ ಕೋಳಿವಾಡ ತಿಳಿಸಿದ್ದಾರೆ.

