ಕೋಲಾರ : ಕೋಲಾರ ಜಿಲ್ಲೆಯಲ್ಲಿ ಹೃದಯಾಘಾತದಿಂದ ಪೊಲೀಸ್ ಮುಖ್ಯಪೇದೆಯೊಬ್ಬರು ಸಾವನ್ನಪ್ಪಿದ್ದಾರೆ. ಕೆಜಿಎಫ್‌ನ ಊರಿಗಾಂ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 50 ವರ್ಷದ ವೆಂಕಟರಮಣಪ್ಪ ಮೃತಪಟ್ಟ ದುರ್ದೈವಿ. ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿದ್ದ ಪೇದೆಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ವೆಂಕಟರಮಣಪ್ಪ (50) ಎಂದು ಗುರುತಿಸಲಾಗಿದೆ. ಇವರು ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದವರು.ಇವರು ಕೆಜಿಎಫ್ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಊರಿಗಾಂ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ (Head Constable) ಕರ್ತವ್ಯ ನಿರ್ವಹಿಸುತ್ತಿದ್ದರು.
ವೆಂಕಟರಮಣಪ್ಪ ಅವರು ಇತ್ತೀಚೆಗೆ ತೂಕ ಇಳಿಸಿಕೊಳ್ಳುವ ಉದ್ದೇಶದಿಂದ ಡಯಟ್ ಹಾಗೂ ಕೆಲವು ಔಷಧಗಳನ್ನು ತೆಗೆದುಕೊಳ್ಳುತ್ತಿದ್ದರು ಎನ್ನಲಾಗಿದೆ.ಇಂದು ಮುಂಜಾನೆ ಮನೆಯಲ್ಲಿದ್ದಾಗ ಅವರಿಗೆ ದಿಢೀರ್ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಈ ಘಟನೆಯಿಂದ ಮೃತರ ಕುಟುಂಬಸ್ಥರು ಹಾಗೂ ಪೊಲೀಸ್ ಇಲಾಖೆಯ ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.

