HomeLatest Newsಎಲ್ಲ ವಸತಿ ನಿಲಯಗಳಲ್ಲಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಕಡ್ಡಾಯ

ಎಲ್ಲ ವಸತಿ ನಿಲಯಗಳಲ್ಲಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಕಡ್ಡಾಯ

ಮಹಿಳೆಯರಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಮಹಿಳಾ ಆಯೋಗವು ಸದಾ ಸಿದ್ದವಾಗಿದ್ದು, ಮಹಿಳೆಯರ ರಕ್ಷಣೆಗೆ ಹಾಗೂ ಮಹಿಳೆಯರಿಗೆ ಕಾನೂನಾತ್ಮಕ ನೆರವು ನೀಡಲು ಬದ್ಧವಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ಹೇಳಿದರು.

ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಹಮ್ಮಿಕೊಂಡಿದ್ದ ಪ್ರವಾಸ ಕಾರ್ಯಕ್ರಮದಲ್ಲಿ ಗಮನಿಸಿದ ಅಂಶಗಳು, ಸಮಸ್ಯೆಗಳ ಕುರಿತು ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಲು ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿ 10ಕ್ಕಿಂತ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಕಡ್ಡಾಯವಾಗಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚಿಸಲು ಸೂಚಿಸಲಾಗಿದೆ. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷತೆಯ ವಾತಾವರಣ ನಿರ್ಮಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಗೆ ಕಡಿವಾಣ ಹಾಕುವಂತೆ ಅಬಕಾರಿ ಇಲಾಖೆಗೆ ಸೂಚಿಸಲಾಗಿದೆ. ನಗರದ ಸಿದ್ದೇಶ್ವರ ನಗರದಲ್ಲಿನ ಅಲೆಮಾರಿ ಜನಾಂಗ ಭೇಟಿ ಮಾಡಿದ್ದು, ಅವರಿಗೆ ನಗರಸಭೆಯಿಂದ ಅಗತ್ಯ ಸೌಕರ್ಯ ಒದಗಿಸಲಾಗಿದೆ. ಆ ಪ್ರದೇಶದಲ್ಲಿನ ವಿದ್ಯುತ್ ಕಂಬ ದುರಸ್ಥಿಗೊಳಿಸಲಾಗಿದೆ. ಆದರೆ ಅಲ್ಲಿನ ಅಂಗನವಾಡಿ ಪಕ್ಕದಲ್ಲಿಯೇ ರೈಲು ಹಳಿ ಇರುವುದರಿಂದ ಪೋಷಕರು ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದು, ಸುಮಾರು 3 ಕಿ.ಮೀ ವ್ಯಾಪ್ತಿಯಲ್ಲಿ ಸುರಕ್ಷಾ ಫೆನ್ಸಿಂಗ್ ಅಳವಡಿಸಲು ಸೂಚನೆ ನೀಡಿದ್ದೇನೆ ಎಂದು ಅವರು ಮಾಹಿತಿ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲ ವಿದ್ಯಾರ್ಥಿ/ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಬೇಕು. ಗುಣಮಟ್ಟದ ಆಹಾರ ನೀಡಬೇಕು. ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಸರ್ಕಾರಿ ಯೋಜನೆ, ಸೌಲಭ್ಯಗಳ ಬಗ್ಗೆ ಈ ಭಾಗದ ಜನರಿಗೆ ಇನ್ನೂ ಹೆಚ್ಚಿನ ಜಾಗೃತಿಯ ಅವಶ್ಯಕತೆ ಇದೆ. ಸರ್ಕಾರಿ ಸೌಲಭ್ಯವನ್ನು ಒದಗಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದರೂ, ಸೌಲಭ್ಯಗಳನ್ನು ಹೇಗೆ ಪಡೆಯಬೇಕು ಎಂಬ ಬಗ್ಗೆ ಸಾರ್ವಜನಿಕರಿಗೂ ಅರಿವಿರಬೇಕು. ಪ್ರತಿ ಹಳ್ಳಿಯಲ್ಲಿಯೂ ಮಹಿಳಾ ಗ್ರಾಮಸಭೆಯನ್ನು ಕಡ್ಡಾಯವಾಗಿ ನಡೆಸಿ, ಮಹಿಳೆಯರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.

ಜಿಲ್ಲೆಯ ತಾಯಿ ಮತ್ತು ಮಗುವಿನ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಸೌಕರ್ಯಗಳನ್ನು, ಗುಣಮಟ್ಟದ ಆಹಾರವನ್ನು ನೀಡುತ್ತಿರುವುದು ಪ್ರಶಂಸನೀಯ. ಕಾರಟಗಿ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಿದಾರ್ಥಿನಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ್ದು, ಅಲ್ಲಿ ಉತ್ತಮ ಸೌಕರ್ಯಗಳನ್ನು ವಿದ್ಯಾರ್ಥಿನಿಯರಿಗೆ ಒದಗಿಸಲಾಗಿದೆ. ಜಿಲ್ಲೆಯ ಎಲ್ಲ ವಸತಿ ನಿಲಯಗಳಲ್ಲಿಯೂ ಇಂತಹ ವ್ಯವಸ್ಥೆಗಳನ್ನು ಒದಗಿಸಬೇಕು. ನರೇಗಾ ಕಾರ್ಯಕ್ರಮದಡಿ ಶೇ.50 ರಷ್ಟು ಜಾಬ್‌ಕಾರ್ಡ್ಗಳನ್ನು ಮಹಿಳೆಯರಿಗೆ ನೀಡಬೇಕು. ಹೆಚ್ಚಿನ ಉದ್ಯೋಗದಿನಗಳನ್ನು ಒದಗಿಸಬೇಕು ಎಂದು ಇಲಾಖಾ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಡಿವೈಎಸ್‌ಪಿ ಮುತ್ತಣ್ಣ ಸವರಗೋಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular