ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಸೆಪ್ಟೆಂಬರ್ 22 ರಿಂದ 24ರ ವರೆಗೆ ರಾಜ್ಯದ ಹಲವು ಕಡೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 23ರಂದು ಕರಾವಳಿ ಮತ್ತು ಉತ್ತರ ಕನ್ನಡ ಭಾಗಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಸೆಪ್ಟೆಂಬರ್ 24ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ವಾಯುಭಾರ ಕುಸಿತ ಉಂಟಾಗಿರುವುದರಿಂದ ಈಗಾಗಲೇ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಎರಡು ದಿನಗಳಿಂದ ಮಳೆ ಆಗುತ್ತಿದೆ ಇದರ ಪ್ರಭಾವ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸೆಪ್ಟೆಂಬರ್ 22ರಂದು ದಕ್ಷಿಣ ಕನ್ನಡ, ಗದಗ, ಕೊಪ್ಪಳ, ಬಾಗಲಕೋಟೆ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮಂಡ್ಯ, ಮೈಸೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. (ಚಿತ್ರಕೃಪೆ: ಎಐ)
ರಾಜ್ಯದಲ್ಲಿ ಸಿಡಿಲಿಗೆ ಮೂವರು ಬಲಿ
ಬೆಂಗಳೂರು: ಮುಂಗಾರು ನಿರ್ಗಮನ ಹಂತದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಕೆಲವು ಕಡೆ ಮತ್ತೆ ಮಳೆ ಚುರುಕುಗೊಂಡಿದೆ. 10 ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಿದ್ದು, ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಮಳೆ ಆಗುತ್ತಿದ್ದು, ಸಿಡಿಲಬ್ಬರದ ಮಳೆಗೆ ಮೂವರು ಬಲಿಯಾಗಿದ್ದಾರೆ. ಬೆಂಗಳೂರು, ಚಾಮರಾಜನಗರ ಸೇರಿ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಿದೆ.
ಕಲುಬರಗಿ ಜಿಲ್ಲೆ ಕಮಲಾಪುರ ತಾಲೂಕಿನ ನಾಗೂರ ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆಯರಿಬ್ಬರು ಮೃತಪಟ್ಟಿದ್ದಾರೆ. ವಿಜಯಲಕ್ಷ್ಮಿ ಬಸಯ್ಯ ಗುತ್ತೇದಾರ್(48) ಹಾಗೂ ಶೈಜಾದ್ ಬಿ ಪಾತರು ಸಾಬ್ (58) ಮೃತರು. ಮಧ್ಯಾಹ್ನದ ವೇಳೆ ಹೊಲದ ಬಳಿಯ ಮರದ ಕೆಳಗೆ ಕುಳಿತು ಊಟ ಮಾಡುತ್ತಿದ್ದಾಗ ಸಿಡಿಲು ಬಡಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂ ಕಿನ ಮದ್ದೂರ ಗ್ರಾಮದ ಬಳಿ ಹೊಲಕ್ಕೆ ತೆರಳಿದ್ದವೇಳೆ ಸಿಡಿಲು ಬಡಿದು ಕೇದಾರಪ್ಪ ಬಸಪ್ಪ ಗುರ್ಲಹೊಸೂರ(47) ಎಂಬುವರು ಮೃತಪಟ್ಟಿದ್ದಾರೆ. ಭೀಮಪ್ಪ ಎಂಬುವರು ಗಾಯಗೊಂಡಿದ್ದು, ಅವರನ್ನು ಧಾರವಾಡದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಲ್ಲಿ ಮಳೆಯಿಂದಾಗಿ ಹಲವು ರಸ್ತೆಗಳು, ಪ್ರೈಓವರ್ ಗಳು, ಅಂಡರ್ ಪಾಸ್‌ಗಳು ಜಲಾವೃತಗೊಂಡು ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ಹಲವೆಡೆ ಮರಗಳು ಧರೆಗುರುಳಿದ ಪರಿಣಾಮ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.
ಚಾಮರಾಜನಗರ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ಸುಮಾರು 50ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. ವೈಶಂಪಾಳ್ಯ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಬಿದ್ದು, ವೃದ್ಧೆಯೊಬ್ಬರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ರಾಮಾಪುರ ಗ್ರಾಮದ ಹಲವೆಡೆ ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ. ಚಂಗ ವಾಡಿ ಗ್ರಾಮದಲ್ಲಿ ತಾತ್ಕಾಲಿಕ ಸೇತುವೆ ಯೊಂದು ಕೊಚ್ಚಿಹೋಗಿದೆ. ಬಂಡಳ್ಳಿ ಗ್ರಾಮದಲ್ಲಿ ಕೊಟ್ಟಿಗೆ ಕುಸಿದು ಬಿದ್ದು, ಹಸು ಮೃತಪಟ್ಟಿದೆ. ಹಲವು ಹಸುಗಳು ಗಂಭೀರವಾಗಿ ಗಾಯಗೊಂಡಿವೆ.
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನವಂದಲಿ ಗ್ರಾಮದಲ್ಲಿ ಸಿಡಿಲಿನ ಹೊಡೆತಕ್ಕೆ ಆಂಜನೇಯ ದೇವಸ್ಥಾನದ ಗೋಪುರಕ್ಕೆ ಹಾನಿಯಾಗಿದೆ. ಇದೇ ವೇಳೆ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಗದಗ ಜಿಲ್ಲೆಗಳ ಹಲವೆಡೆ ಮಳೆಯಾಗಿದೆ.

