ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರದಿಂದ ಐದು ದಿನ ಭಾರಿ ಮಳೆಯಾಗುವ ಸಂಭವವಿದೆ. ಈ ಅವಧಿಯಲ್ಲಿ ಗಾಳಿ ಕೂಡ ಜೋರಾಗಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 20 ರಿಂದ 24ರ ವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗಲಿದೆ. ಜುಲೈ 20 ಮತ್ತು ಜುಲೈ 21 ರಂದು ಕರಾವಳಿ ಜಿಲ್ಲೆಗಳ ನದಿ ಪಾತ್ರಗಳಲ್ಲಿ ಪ್ರವಾಹ ಸನ್ನಿವೇಶ ನಿರ್ಮಾಣವಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಜಿಲ್ಲೆಗಳಿಗೆ ಭಾನುವಾರ ಮತ್ತು ಸೋಮವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉಳಿದ ಮೂರು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಮಲೆನಾಡು ಜಿಲ್ಲೆಗಳಿಗೆ ಐದು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಕೊಡಗು ಜಿಲ್ಲೆಗೆ ಭಾನುವಾರ ಆರೆಂಜ್ ಅಲರ್ಟ್ ನೀಡಲಾಗಿದೆ.