ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಒಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದ್ದು, ಶುಕ್ರವಾರ ಕೂಡ ಭಾರಿ ಮಳೆಯಾಗಿದೆ.
ಮಂಗಳೂರು, ಸುಳ್ಯ, ಉಡುಪಿ, ಸಿದ್ದಾಪುರ, ಕೊಟ್ಟಿಗೆಹಾರ, ಹೊನ್ನಾವರ, ಆಗುಂಬೆ, ಉಪ್ಪಿನಂಗಡಿ, ಕುಂದಾಪುರ, ಕಾರ್ಕಳ, ಗೇರುಸೊಪ್ಪ, ಪುತ್ತೂರು ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ. ಇನ್ನು ಒಂದು ವಾರ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ಆಗಸ್ಟ್ 30 ಮತ್ತು 31 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ನಂತರದ ಐದು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಒಳನಾಡಿನ ಧಾರವಾಡ, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆಗಸ್ಟ್ 30ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಸೆಪ್ಟೆಂಬರ್ ತಿಂಗಳಿನಿಂದ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.