ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟ ಮುಂದುವರೆದಿದ್ದು, ಮುಂದಿನ ಮೂರು ದಿನ ರಾಜ್ಯದ ಬಹುತೇಕ ಕಡೆ ಗಾಳಿ ಸಹಿತ ಭಾರಿ ಮಳೆ ಆಗಲಿದೆ. ಮಂಗಳವಾರ ಮತ್ತು ಬುಧವಾರ ಕರಾವಳಿ, ಮಲೆನಾಡು ಭಾಗದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂಗಾರು ಪ್ರವೇಶಕ್ಕೆ ಮೊದಲೇ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಮಂಗಳವಾರ ಉತ್ತರ ಕನ್ನಡ, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಕೊಡಗು, ಹಾಸನ, ಹಾವೇರಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬುಧವಾರ ಕೂಡ ಭಾರಿ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ, ಚಿಕ್ಕಮಗಳೂರು, ಜಿಲ್ಲೆಗಳಿಗೆ ರೆಡ್ ಅಲರ್ಟ್, ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಧಾರವಾಡ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಆರೆಂಜ್ ಘೋಷಿಸಲಾಗಿದೆ, ಮಳೆ ಸಂದರ್ಭದಲ್ಲಿ ಭಾರಿ ಗಾಳಿ ಬೀಸಲಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.