ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಆಗಸ್ಟ್ 18ರಂದು ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಶಿವಮೊಗ್ಗ
ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವುದರಿಂದ, ಹವಾಮಾನ ಇಲಾಖೆ ಘೋಷಿಸಿದ ರೆಡ್ ಅಲರ್ಟ್ ಹಾಗೂ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಅಣೆಕಟ್ಟುಗಳು ಪೂರ್ಣ ಸಾಮರ್ಥ್ಯವನ್ನು ತಲುಪಿರುವುದರಿಂದ, ಜಿಲ್ಲಾಡಳಿತವು 18-08-2025 ರಂದು ಇಡೀ ಶಿವಮೊಗ್ಗ ಜಿಲ್ಲೆಯ ಅಂಗನವಾಡಿಗಳು, ಶಾಲೆಗಳು, ಪಿಯು ಕಾಲೇಜುಗಳು ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಿದೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ 10 ತಾಲೂಕುಗಳಲ್ಲಿ ರಜೆ ನೀಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ. ಶಿರಸಿ. ಸಿದ್ದಾಪುರ. ಯಲ್ಲಾಪುರ, ದಾಂಡೇಲಿ. ಜೋಯಿಡಾ ತಾಲೂಕುಗಳಲ್ಲಿ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ರಜೆ ಘೋಷಿಸಿ ಆದೇಶಿಸಿದ್ದಾರೆ. ಮುಂಡಗೋಡ, ಹಳಿಯಾಳ ತಾಲೂಕಿನ ಶಾಲೆಗಳಿಗೆ ರಜೆ ಇರುವುದಿಲ್ಲ.
ಚಿಕ್ಕಮಗಳೂರು
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್. ಪುರ ತಾಲೂಕುಗಳಲ್ಲಿ, ಚಿಕ್ಕಮಗಳೂರು ತಾಲೂಕಿನ ಆವತಿ, ಜಾಗರ, ಖಾಂಡ್ಯ, ಆಲ್ದೂರು ಹೋಬಳಿ ತೀವ್ರವಾಗಿ ಮಳೆಯಾಗುತ್ತಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಆಗಸ್ಟ್ 18ರಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷ್ಠಿಸಲಾಗಿದ್ದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಕೊಡಗು
ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜೋರು ಗಾಳಿ ಮಳೆಯಾಗುವ ಹಿನ್ನೆಲೆಯಲ್ಲಿ ಇಂದು ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶಿಸಿದ್ದಾರೆ.
ಹಾಸನ
ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು, ಆಲೂರು ತಾಲೂಕಿನ ಕೆಂಚಮ್ಮನ ಹೊಸಕೇಟೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ನೀಡಿ ಡಿಸಿ ಕೆ.ಎ.ಸ್ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾರ್ಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ದರ್ಶನ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.