ಬೆಂಗಳೂರು : ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರದವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು. ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಮುಂದಿನ ಒಂದು ವಾರದವರೆಗೆ ಕರಾವಳಿ ಹಾಗೂ ಒಳನಾಡಿನ 23 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಕೆಲವೆಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಜೂನ್ 2ರವರೆಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ಪ್ರಕಾರ, ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಮತ್ತು ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಬೀದರ್, ಕಲ್ಬುರ್ಗಿ, ವಿಜಯಾಪುರ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗಲಿದೆ.

