ಉಡುಪಿ : ಭಾರಿ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯ ಶಾಲಾ-ಕಾಲೇಜಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ನಾಳೆ ( ಜು.24) ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ. ಆದರೆ ಪದವಿ ಕಾಲೇಜಿನ ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿಯೂ ವರುಣಾರ್ಭಟ ಹೆಚ್ಚಲಿದೆ. ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಒಂದೇ ಸಮನೇ ಮಳೆ ಸುರಿಯುತ್ತಿದ್ದು, ಮುಂದಿನ ಕೆಲ ಗಂಟೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಗಾಳಿಯು ಗಂಟೆಗೆ 30-50 ಕಿ.ಮೀ ವೇಗದಲ್ಲಿ ಬೀಸಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಹಾಸನ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯ ಅಬ್ಬರ ಜೋರಾಗಲಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಲಿದೆ.