ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮಳೆ ಎಡಬಿಡದೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹಾವೇರಿ
ಹಾವೇರಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಆಗಸ್ಟ್ 20ರಂದು ರಜೆ ಘೋಷಣೆ ಮಾಡಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿರಂತರ ಮಳೆಯ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 20ರಂದು ಹಾವೇರಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಆದೇಶಿಸಿದ್ದಾರೆ.
ಯಾದಗಿರಿ
ಯಾದಗಿರಿ ಜಿಲ್ಲೆಯಲ್ಲಿಯೂ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಡಿಡಿಪಿಐ ಚನ್ನಬಸಪ್ಪ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ
ಬೆಳಗಾವಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಆಗಸ್ಟ್ 20ರಂದು ರಜೆ ನೀಡಲಾಗಿದೆ. ಅಂಗನವಾಡಿ, ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಧಾರವಾಡ
ಧಾರವಾಡ ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ , ಪಿಯುಸಿ ಹಾಗೂ ಪದವಿ ಕಾಲೇಜುಗಳಿಗೆ ರಜೆ ನೀಡಿ ಡಿಸಿ ದಿವ್ಯಾ ಪ್ರಭು ಆದೇಶ ಹೊರಡಿಸಿದ್ದಾರೆ.